ಹೊಸದಿಗಂತ ವರದಿ, ಬಳ್ಳಾರಿ:
ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಉಭಯ ಜಿಲ್ಲೆಯ ಎಲ್ಲ ತಾಲ್ಲೂಕಿನ ಅಂಗನವಾಡಿ ಕೇಂದ್ರ ಸೇರಿದಂತೆ ಶಾಲಾ-ಕಾಲೇಜುಗಳಿಗೆ ಜು.27ರಂದು (ಗುರುವಾರ) ರಜೆ ಘೋಷಿಸಲಾಗಿದೆ.
ವಿಜಯನಗರ ಜಿಲ್ಲಾಧಿಕಾರಿ ದಿವಾಕರ ಎಂ.ಎಸ್. ಹಾಗೂ ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದು, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜು.27ರಂದು ಮಳೆಯಾಗುವ ಸಾಧ್ಯತೆಯಿದ್ದು, ಮಕ್ಕಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಗುರುವಾರ ಒಂದು ದಿನ ಮಾತ್ರ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ, ಖಾಸಗಿ ಮತ್ತು ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ 2005ರ ಸೆಕ್ಷನ್ 26, 30 ಹಾಗೂ 34 ರಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ರಜೆಯನ್ನು ಘೋಷಿಸಲಾಗಿದೆ.
ರಜೆ ಘೋಷಣೆಯಿಂದ ಉಂಟಾಗುವ ಕಲಿಕಾ ಸಮಯವನ್ನು ಶನಿವಾರ ಅಥವಾ ಭಾನುವಾರ ದಿನದಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ಪಠ್ಯಕ್ರಮವನ್ನು ಸಮತೋಲನಗೊಳಿಸಬೇಕು ಎಂದು ಆದೇಶಿಸಿದ್ದಾರೆ. ಆದರೇ, ವಿಜಯನಗರ ಜಿಲ್ಲೆಯಲ್ಲಿ ಖಾಸಗಿ ಹಾಗೂ ಸರ್ಕಾರಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದು, ಬಳ್ಳಾರಿ ಜಿಲ್ಲೆಯಲ್ಲಿ ಕಾಲೇಜುಗಳಿಗೆ ರಜೆ ಘೋಷಿಸಿಲ್ಲ. ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳು ಎದುರಾದಲ್ಲಿ 08392, 277100 ಅಥವಾ 8277888866 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.