ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ವಿವಿಧ ಭಾಗಗಳಲ್ಲಿ ಹವಾಮಾನ ಏಕಾಏಕಿ ತೀವ್ರಗೊಂಡಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಜನಜೀವನದ ಮೇಲೆ ಭಾರಿ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉತ್ತರ ಭಾರತದಲ್ಲಿ ಶೀತಗಾಳಿ ಮತ್ತು ದಟ್ಟ ಮಂಜು ಹೆಚ್ಚಾಗುವ ಸಾಧ್ಯತೆ ಇದ್ದರೆ, ಪರ್ವತ ಪ್ರದೇಶಗಳಲ್ಲಿ ಮಳೆ ಹಾಗೂ ಹಿಮಪಾತದ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಮತ್ತು ಪೂರ್ವ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯೂ ಇದೆ.
ದೆಹಲಿ, ಉತ್ತರ ಪ್ರದೇಶ, ಹರಿಯಾಣ, ಪಂಜಾಬ್ ಹಾಗೂ ಬಿಹಾರದಲ್ಲಿ ಮಂಜಿನಿಂದ ಗೋಚರತೆ ಕುಸಿದಿದ್ದು, ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗಿದೆ. ದಟ್ಟ ಮಂಜಿನ ಪರಿಣಾಮವಾಗಿ ದೆಹಲಿ ವಿಮಾನ ನಿಲ್ದಾಣದಲ್ಲಿ ಹಲವು ವಿಮಾನಗಳ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಚಳಿ ತೀವ್ರವಾಗಿದ್ದು, ಕೆಲವು ಕಡೆ ನಿರಂತರ ಹಿಮಪಾತದಿಂದ ರಸ್ತೆ ಸಂಚಾರಕ್ಕೆ ತೊಂದರೆ ಎದುರಾಗಿದೆ.
ಜಮ್ಮು–ಕಾಶ್ಮೀರ ಮತ್ತು ಲಡಾಖ್ ಭಾಗಗಳಲ್ಲಿ ಭಾರೀ ಮಳೆ ಅಥವಾ ಹಿಮಪಾತ ಸಂಭವಿಸುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ. ದಕ್ಷಿಣ ಭಾರತದಲ್ಲಿಯೂ ಕೇರಳ, ತಮಿಳುನಾಡು, ಕರ್ನಾಟಕ ಮತ್ತು ತೆಲಂಗಾಣದ ಕೆಲ ಭಾಗಗಳಲ್ಲಿ ಮಳೆಯ ಚಟುವಟಿಕೆ ಹೆಚ್ಚಾಗುವ ನಿರೀಕ್ಷೆಯಿದೆ. ಮುನ್ನಾರ್ ಸೇರಿದಂತೆ ಗುಡ್ಡಗಾಡು ಪ್ರದೇಶಗಳಲ್ಲಿ ತಾಪಮಾನ ಗಣನೀಯವಾಗಿ ಇಳಿಕೆಯಾಗಿದೆ.

