ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್ ನ ಸಮೀಪದ ಬೆಕರ್ಸ್‌ಡಾಲ್ ಪಟ್ಟಣದಲ್ಲಿ ಭಾನುವಾರ ಭೀಕರ ಗುಂಡಿನ ದಾಳಿ ನಡೆದಿದೆ. ಜನಸಮೂಹದಿಂದ ತುಂಬಿದ್ದ ಹೋಟೆಲ್‌ಗೆ ಅನಿರೀಕ್ಷಿತವಾಗಿ ನುಗ್ಗಿದ ಶಸ್ತ್ರಸಜ್ಜಿತ ದಾಳಿಕೋರರು ನಿರಂತರವಾಗಿ ಗುಂಡು ಹಾರಿಸಿದ್ದು, ಕನಿಷ್ಠ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಇನ್ನೂ ಸುಮಾರು 10 ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ದಾಳಿಯ ನಂತರ ಪ್ರದೇಶದಲ್ಲಿ ಭೀತಿ ಮತ್ತು ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಸ್ಥಳಕ್ಕೆ ತಲುಪುವಷ್ಟರಲ್ಲಿ ದಾಳಿಕೋರರು ಪರಾರಿಯಾಗಿದ್ದು, ತಕ್ಷಣ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ದಾಳಿಯ ಹಿಂದಿನ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ. ಶಂಕಿತರ ಪತ್ತೆಗೆ ಪೊಲೀಸರು ವ್ಯಾಪಕ ಶೋಧ ಕಾರ್ಯಾಚರಣೆ ಆರಂಭಿಸಿದ್ದು, ಬೆಕರ್ಸ್‌ಡಾಲ್ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

