ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದಲ್ಲಿ ಎನ್ಕೌಂಟರ್ ನಡೆದಿದ್ದು, ಈ ವೇಳೆ ಉಗ್ರರ ಗುಂಡಿನ ದಾಳಿಗೆ ಮೂವರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ.
ಕುಲ್ಗಾಮ್ ಜಿಲ್ಲೆಯ ಹಾಲನ್ ಅರಣ್ಯ ಪ್ರದೇಶದಲ್ಲಿ ಉಗ್ರರು ಅವಿತುಕೊಂಡಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಶುಕ್ರವಾರ ಸಂಜೆ ಅರಣ್ಯ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರೆದು ಶೋಧ ಕಾರ್ಯಾಚರಣೆ ನಡೆಸಿದರು.
ಈ ವೇಳೆ ಅವಿತುಕೊಂಡಿದ್ದ ಉಗ್ರರು ಭದ್ರತಾ ಪಡೆಗಳ ಮೇಲೆ ಮನಸೋ ಇಚ್ಚೆ ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಮೂವರು ಭದ್ರತಾ ಪಡೆ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೂವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಾಲನ್ ಅರಣ್ಯ ಪ್ರದೇಶದಲ್ಲಿ ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಅಲ್ಲದೇ ಶೋಧಕ್ಕಾಗಿ ಭದ್ರತಾ ಪಡೆಯನ್ನು ಸಹ ಹೆಚ್ಚಿಸಲಾಗಿದೆ ಎಂದು ಶ್ರೀನಗರ ಮೂಲದ ಸೇನೆಯ ಚಿನಾರ್ ಕಾರ್ಪ್ಸ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಪೂಂಚ್ ಮತ್ತು ರಜೌರಿ ಜಿಲ್ಲೆಗಳಲ್ಲಿ ನಡೆದ ಎರಡು ಪ್ರತ್ಯೇಕ ಎನ್ಕೌಂಟರ್ಗಳಲ್ಲಿ ಐವರು ಕಮಾಂಡೋಗಳು ಸೇರಿದಂತೆ 10 ಸೇನಾ ಸೈನಿಕರು ಹುತಾತ್ಮರಾಗಿದ್ದರು.