ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರ ಉಚಿತ ನೀಡಿರುವ ಯೋಜನೆಗಳಲ್ಲಿ ಗೃಹಜ್ಯೋತಿಯು ಒಂದಾಗಿದ್ದು, ರಾಜ್ಯದ ಜನರಿಗೆ ಉಚಿತ ವಿದ್ಯುತ್ ನೀಡುವ ಯೋಜನೆ ಇದಾಗಿದೆ. ಆದರೆ ಇದರ ಹೊರೆಯನ್ನು ತಗ್ಗಿಸುವ ಸಲುವಾಗಿ ಸರ್ಕಾರ ಲೋಡ್ ಶೆಡ್ಡಿಂಗ್ ಜಾರಿಮಾಡುತ್ತಿದ್ದು, ಲೋಡ್ ಶೆಡ್ಡಿಂಗ್ ಅನಿವಾರ್ಯ ಎಂದು ಸಚಿವ ಜಿ. ಪರಮೇಶ್ವರ ಹೇಳಿದ್ದಾರೆ. ಮಳೆ ಕೊರತೆಯಿಂದ ವಿದ್ಯುತ್ ಉತ್ಪಾದನೆ ಮೇಲೆ ಪರಿಣಾಮವಾಗಿದೆ. ಬೇಡಿಕೆಯೂ ಹೆಚ್ಚಾಗಿದೆ ಎಂದು ಅವರು ತಿಳಿಸಿದ್ದಾರೆ.
ತುಮಕೂರಿನಲ್ಲಿ ನಡೆದ ಸ್ವಾತಂತ್ರ‍್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಳಿಕ ಮಾತನಾಡಿದ ಅವರು, ಮಳೆ ಕೊರತೆಯಿಂದ ವಿದ್ಯುತ್ ಉತ್ಪಾದನೆಗೆ ಧಕ್ಕೆಯಾಗುವ ಸಂಭವವಿದೆ ಎಂದು ಹೇಳಿದ್ದಾರೆ.
ರಾಜ್ಯದ ಸುಮಾರು ಹನ್ನೊಂದು ಜಿಲ್ಲೆಗಳಲ್ಲಿ ಈ ವರ್ಷ ಸರಾಸರಿಗಿಂತ ಕಡಿಮೆ ಮಳೆಯಾಗಿದೆ. ಜಲವಿದ್ಯುತ್ ಉತ್ಪಾದನೆಗೆ ಧಕ್ಕೆಯಾಗಿದೆ. ಲೋಡ್ ಶೆಡ್ಡಿಂಗ್ ಮಾಡುವ ಮೂಲಕ ನಾವು ವಿದ್ಯುತ್ ಬೇಡಿಕೆಯನ್ನು ನಿರ್ವಹಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ.
ಮಳೆ ಕಡಿಮೆಯಾದ ಕಾರಣ ರಾಜ್ಯದ ಕೆಲವು ಭಾಗಗಳನ್ನು ಬರ ಪೀಡಿತ ಪ್ರದೇಶಗಳೆಂದು ಘೋಷಿಸಲಾಗುವುದು. ತುಮಕೂರಿನ ಶೇ 35ರಷ್ಟು ರೈತರು ಮಾತ್ರ ಬಿತ್ತನೆ ಆರಂಭಿಸಿದ್ದಾರೆ. ಮಳೆ ಕಡಿಮೆಯಾಗಿರುವುದೇ ಕಡಿಮೆ ಪ್ರಮಾಣದಲ್ಲಿ ರೈತರು ಬಿತ್ತನೆ ಮಾಡಲು ಕಾರಣವಾಗಿದೆ. ವಾಡಿಕೆಗಿಂತ ಕಡಿಮೆ ಮಳೆಯಾಗುವ ಪ್ರದೇಶಗಳನ್ನು ಮಾಹಿತಿ ಪಡೆದ ನಂತರ ಬರಪೀಡಿತ ಪ್ರದೇಶಗಳೆಂದು ಘೋಷಿಸುತ್ತೇವೆ ಎಂದು ಪರಮೇಶ್ವರ ಹೇಳಿದ್ದಾರೆ.