ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಂಗ್ಲಾದೇಶದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರದ ಕುರಿತಾಗಿ ಭಾರತದಲ್ಲಿ ಆಶ್ರಯ ಪಡೆದಿರುವ ಮಾಜಿ ಪ್ರಧಾನಿ ಶೇಖ್ ಹಸೀನಾ, ಮಧ್ಯಂತರ ಸರ್ಕಾರದ ಕಾರ್ಯವೈಖರಿಯನ್ನು ತೀವ್ರವಾಗಿ ಟೀಕಿಸಿದ್ದಾರೆ. ಮುಹಮ್ಮದ್ ಯೂನಸ್ ನೇತೃತ್ವದ ಸರ್ಕಾರ ದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಸಂಪೂರ್ಣವಾಗಿ ವಿಫಲವಾಗಿದೆ ಎಂದು ಅವರು ಆರೋಪಿಸಿದ್ದಾರೆ.
ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಹತ್ಯೆಯ ನಂತರ ದೇಶದ ಹಲವು ಭಾಗಗಳಲ್ಲಿ ಉದ್ರಿಕ್ತತೆ ಹೆಚ್ಚಾಗಿದ್ದು, ರಾಜಧಾನಿ ಢಾಕಾದಲ್ಲಿ ಪ್ರತಿಭಟನೆಗಳು ಹಿಂಸಾತ್ಮಕ ರೂಪ ಪಡೆದುಕೊಂಡಿವೆ. ಈ ಬೆಳವಣಿಗೆಗಳು ಸರ್ಕಾರದ ದುರ್ಬಲ ಆಡಳಿತಕ್ಕೆ ಸ್ಪಷ್ಟ ಸಾಕ್ಷಿಯಾಗಿದೆ ಎಂದು ಶೇಖ್ ಹಸೀನಾ ಅಭಿಪ್ರಾಯಪಟ್ಟಿದ್ದಾರೆ.
ಇತ್ತೀಚೆಗೆ ಧರ್ಮನಿಂದನೆ ಆರೋಪದ ಹೆಸರಿನಲ್ಲಿ ಹಿಂದೂ ವ್ಯಕ್ತಿಯೊಬ್ಬನನ್ನು ಜನಸಮೂಹ ಥಳಿಸಿ ಹತ್ಯೆ ಮಾಡಿದ ಘಟನೆ ದೇಶದ ಸ್ಥಿತಿಗತಿಯನ್ನು ಮತ್ತಷ್ಟು ಗಂಭೀರಗೊಳಿಸಿದೆ. ಈ ಘಟನೆಯನ್ನು ಮಧ್ಯಂತರ ಸರ್ಕಾರ ಖಂಡಿಸಿ ಕಠಿಣ ಕ್ರಮದ ಭರವಸೆ ನೀಡಿದ್ದರೂ, ನೆಲದ ವಾಸ್ತವ ಪರಿಸ್ಥಿತಿ ಬೇರೆಯೇ ಇದೆ ಎಂದು ಹಸೀನಾ ಹೇಳಿದ್ದಾರೆ.

