ಹೊಸದಿಗಂತ ವರದಿ ಮಡಿಕೇರಿ:
ಕಾಡಾನೆ ದಾಳಿಗೆ ಸಿಲುಕಿ ಮಹಿಳೆಯೊಬ್ಬರು ಸಾವಿಗೀಡಾದ ಘಟನೆ ಸಿದ್ದಾಪುರ ಸಮೀಪದ ಮಾಲ್ದಾರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಟ್ಟಂ ಎಂಬಲ್ಲಿ ಸೋಮವಾರ ಮುಂಜಾನೆ ನಡೆದಿದೆ.
ಮೃತರನ್ನು ಆಯಿಷಾ (63) ಎಂದು ಗುರುತಿಸಲಾಗಿದ್ದು, ಸೋಮವಾರ ಬೆಳಗ್ಗೆ ಮನೆಯ ಸಮೀಪ ವಾಕಿಂಗ್ ಮಾಡುತ್ತಿದ್ದ ಸಂದರ್ಭ ಕಾಡಾನೆ ದಾಳಿ ಮಾಡಿರುವುದಾಗಿ ಹೇಳಲಾಗಿದೆ.
ಕಾಡಾನೆ ದಾಳಿ ಖಂಡಿಸಿ ಸ್ಥಳದಲ್ಲೇ ಪ್ರತಿಭಟನೆ ನಡೆಸಿರುವ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದು, ಅರಣ್ಯ ಸಚಿವರು ಸ್ಥಳಕ್ಕೆ ಬರಬೇಕೆಂದು ಪಟ್ಟು ಹಿಡಿದಿದ್ದಾರೆ.
ಸ್ಥಳಕ್ಕೆ ಕಾರ್ಮಿಕ ಸಂಘಟನೆಯ ಮುಖಂಡರು ಹಾಗೂ ಸುತ್ತಮುತ್ತಲ ಗ್ರಾಮಗಳಿಂದ ಕಾರ್ಮಿಕರು ಆಗಮಿಸಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ಕಾಡಾನೆ ಹಾವಳಿಯನ್ನು ಶಾಶ್ವತವಾಗಿ ತಡೆಗಟ್ಟಬೇಕೆಂದು ಒತ್ತಾಯಿಸಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿರುವ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಪ್ರತಿಭಟನಾಕಾರರ ಮನವೊಲಿಕೆಗೆ ಯತ್ನಿಸಿದ್ದಾರೆ.