ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಲಕನ ನಿಯಂತ್ರಣ ತಪ್ಪಿ ಸ್ಕಾರ್ಪಿಯೋ ಕಾಲುವೆಗೆ ಉರುಳಿ ಬಿದಿದ್ದೆ. ಇದರ ಪರಿಣಾಮ ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದು, ಓರ್ವ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬಿಹಾರದ ಸರನ್ ಜಿಲ್ಲೆಯಲ್ಲಿ ನಡೆದಿದೆ.
ಮಶ್ರಕ್ನ ಕರ್ನ್ ಕುಡಾರಿಯಾ ಗ್ರಾಮದಲ್ಲಿ ಗುರುವಾರ ತಡರಾತ್ರಿ ಈ ದುರಂತ ಸಂಭವಿಸಿದ್ದು, ಅಂತ್ಯಕ್ರಿಯೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಪಸ್ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಗೋಪಾಲ್ಗಂಜ್ ಜಿಲ್ಲೆಯ ಬೈಕುತಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬದ ಜನರು ಅಂತ್ಯಕ್ರಿಯೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಿವಾನ್ನ ಬಸಂತ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಘಿ ಗ್ರಾಮಕ್ಕೆ ತೆರಳಿದ್ದರು. ಎಲ್ಲರೂ ಕಾರ್ಯಕ್ರಮ ಮುಗಿಸಿಕೊಂಡು ಗೋಪಾಲಗಂಜ್ಗೆ ಹಿಂದಿರುಗುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಸ್ಕಾರ್ಪಿಯೋ 15 ಅಡಿ ಆಳದ ಕಾಲುವೆಗೆ ಉರುಳಿ ಬಿದ್ದಿದೆ. ಇದರ ಪರಿಣಾಮ ಕಾರಿನಲ್ಲಿದ್ದ ಆರು ಮಂದಿಯಲ್ಲಿ ಐವರು ಮೃತಪಟ್ಟಿದ್ದಾರೆ. ಓರ್ವ ಮಾತ್ರ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಅಪಘಾತದ ಸ್ಥಳಕ್ಕೆ ಸ್ಥಳೀಯರು ಧಾವಿಸಿ ರಕ್ಷಣೆಗೆ ಮುಂದಾಗಿದ್ದಾರೆ. ಆದರೆ ಯಾರನ್ನೂ ರಕ್ಷಿಸಲು ಸಾಧ್ಯವಾಗಿಲ್ಲ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ವಿಷಯ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ನಂತರ ಎಲ್ಲಾ ಐದು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಬಾಘಿ ಗ್ರಾಮದ ಉಪಾಧ್ಯಕ್ಷ ರೋಹಿತ್ ಗುಪ್ತಾ ಹೇಳಿದ್ದಾರೆ.