ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಹುಚರ್ಚಿತ ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ದೆಹಲಿ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಈ ಹಿಂದೆ ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯವು ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಆರೋಪಪಟ್ಟಿಯನ್ನು ಪರಿಗಣಿಸಲು ನಿರಾಕರಿಸಿತ್ತು. ಕೆಳ ನ್ಯಾಯಾಲಯದ ಈ ನಿರ್ಧಾರವನ್ನು ಪ್ರಶ್ನಿಸಿ ಇ.ಡಿ ಹೈಕೋರ್ಟ್ ಮೆಟ್ಟಿಲೇರಿತ್ತು.
ಜಾರಿ ನಿರ್ದೇಶನಾಲಯದ ಪರವಾಗಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, “ನಾವು ಈಗಾಗಲೇ ಪ್ರಕರಣದ ಸಂಪೂರ್ಣ ತನಿಖೆ ನಡೆಸಿದ್ದೇವೆ. ಹಲವಾರು ಕಡೆ ಶೋಧ ನಡೆಸಿ ಪ್ರಬಲ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ. ಇಷ್ಟಿದ್ದರೂ ಆರೋಪಪಟ್ಟಿಯನ್ನು ಪರಿಗಣಿಸದ ಕೆಳ ನ್ಯಾಯಾಲಯದ ಕ್ರಮ ದೋಷಪೂರಿತವಾಗಿದೆ,” ಎಂದು ವಾದಿಸಿದರು.
ವಾದ-ಪ್ರತಿವಾದಗಳನ್ನು ಆಲಿಸಿದ ಹೈಕೋರ್ಟ್, ಈ ಕುರಿತು ಪ್ರತಿಕ್ರಿಯೆ ನೀಡುವಂತೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಸೂಚಿಸಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಮಾರ್ಚ್ 12ಕ್ಕೆ ನಿಗದಿಪಡಿಸಲಾಗಿದೆ.

