Monday, December 22, 2025

2027ರ ಡಿಸೆಂಬರ್‌ನಲ್ಲಿ 175 ಕಿ.ಮೀ ಮೆಟ್ರೋ ಸಂಚಾರ: 3ನೇ ಹಂತದ ಯೋಜನೆಗೆ ಟೆಂಡರ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರಿನಲ್ಲಿ ಮೆಟ್ರೋ ಮಾರ್ಗ ಹೆಚ್ಚಳ ಮಾಡಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ನಮ್ಮ ಸರ್ಕಾರ ಮುಂದಾಗಿದೆ. 2027ರ ಡಿಸೆಂಬರ್ ವೇಳೆಗೆ ಬೆಂಗಳೂರು ನಗರದಲ್ಲಿ 175 ಕಿ.ಮೀ ಉದ್ದದಷ್ಟು ಮೆಟ್ರೋ ಮಾರ್ಗ ಕಾರ್ಯಾರಂಭವಾಗಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಬಿಎಂಆರ್ ಸಿಎಲ್ ಕಚೇರಿಯಲ್ಲಿ ಮೆಟ್ರೋ ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು.

ಪ್ರಸ್ತುತ 96 ಕಿ.ಮೀ ಉದ್ದದ ಮೆಟ್ರೋ ಮಾರ್ಗ ಕಾರ್ಯನಿರ್ವಹಿಸುತ್ತಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಳದಿ ಮಾರ್ಗ ಚಾಲನೆ ಮಾಡಲಾಗಿದ್ದು, 24 ಕಿ.ಮೀ ಉದ್ದದ ಮೆಟ್ರೋ ಸಂಚಾರ ಆರಂಭ ಮಾಡಲಾಗಿದೆ. 1 ಲಕ್ಷ ಜನ ಈ ಮಾರ್ಗದಲ್ಲಿ ಸಂಚಾರ ಮಾಡುತ್ತಿದ್ದು, ಈ ಮಾರ್ಗದಲ್ಲಿ 30% ದಟ್ಟಣೆ ಕಡಿಮೆಯಾಗಿದೆ ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ ಎಂದು ತಿಳಿಸಿದರು.

ಮುಂದಿನ ವರ್ಷ 41 ಕಿ.ಮೀ ಉದ್ದದ ಮಾರ್ಗ ಕಾರ್ಯಾರಂಭ ಮಾಡಲಾಗುವುದು. 2027ರ ಡಿಸೆಂಬರ್ ವೇಳೆಗೆ ವಿಮಾನ ನಿಲ್ದಾಣ ಮಾರ್ಗ ಸೇರಿದಂತೆ 38 ಕಿ.ಮೀ ಉದ್ದದ ಮಾರ್ಗ ಕಾರ್ಯಾರಂಭ ಮಾಡಲಾಗುವುದು. ಆ ಮೂಲಕ ಬೆಂಗಳೂರಿನಲ್ಲಿ 175 ಕಿ.ಮೀ ಉದ್ದದ ಮಾರ್ಗ ಕಾರ್ಯನಿರ್ವಹಿಸಲಿದೆ. ಇದರ ಹೊರತಾಗಿ ಮಾಗಡಿ ರಸ್ತೆಯಲ್ಲಿ ತಾವರಕೆರೆವರೆಗೆ, ಹೊಸಕೋಟೆ, ಬಿಡದಿ, ನೆಲಮಂಗಲದವರೆಗೆ ವಿಸ್ತರಿಸುವ ಯೋಜನೆ ಹಮ್ಮಿಕೊಂಡಿದ್ದೇವೆ. ಒಂದು ಕಡೆ ಯೋಜನೆ ಕೈಗೆತ್ತಿಕೊಂಡಿದ್ದು, ಉಳಿದ ಕಡೆಗಳಲ್ಲಿ ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ ಎಂದು ತಿಳಿಸಿದರು.

ಮುಂದಿನ ತಿಂಗಳು ಮೆಟ್ರೋ ಮೂರನೇ ಹಂತದ ಯೋಜನೆಯಲ್ಲಿ ಎಲಿವೇಟೆಡ್ ಕಾರಿಡಾರ್ (ಡಬಲ್ ಡೆಕ್ಕರ್) ಸೇರಿದಂತೆ ಸುಮಾರು 100 ಕಿ.ಮೀ ಉದ್ದದ ಮೆಟ್ರೋ ಕಾಮಗಾರಿಗೆ ಟೆಂಡರ್ ಕರೆಯಲಾಗುವುದು. ಸಂಚಾರ ದಟ್ಟಣೆ ನಿಯಂತ್ರಿಸಿ ಜನರ ಪ್ರಯಾಣಕ್ಕೆ ಅನುಕೂಲವಾಗಲು ಕಾಮಗಾರಿ ವೇಗವಾಗಿ ನಡೆಸುತ್ತಿದೆ. ಮೆಟ್ರೋ ನಿಲ್ದಾಣಗಳ ಬಳಿ ಹೆಚ್ಚಿನ ಜಮೀನು ಸ್ವಾಧೀನಪಡಿಸಿಕೊಂಡು ವಾಣಿಜ್ಯ ಚಟುವಟಿಕೆಗೆ ಅವಕಾಶ ಕಲ್ಪಿಸುವಂತೆ ಸೂಚಿಸಲಾಗಿದೆ. ವಾಹನ ನಿಲುಗಡೆಗೂ ಅವಕಾಶ ಕಲ್ಪಿಸಬೇಕಿದೆ ಎಂದರು.

error: Content is protected !!