‘ಕನ್ನಡಾಂಬೆ ಭುವನೇಶ್ವರಿʼ ಕಂಚಿನ ಪ್ರತಿಮೆ ಅನಾವರಣಕ್ಕೆ ತೀರ್ಮಾನ: ಸಚಿವ ತಂಗಡಗಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಾಡದೇವಿ ಭುವನೇಶ್ವರಿ ಪ್ರತಿಮೆ ನಿರ್ಮಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ತೀರ್ಮಾನಿಸಿದೆ.

ಈ ಸಂಬಂಧ ಇಂದು ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಅಧಿಕಾರಿಗಳು ಹಾಗೂ ಶಿಲ್ಪಿಗಳ ಜೊತೆ ಸಚಿವ ಶಿವರಾಜ್ ತಂಗಡಗಿ ಸಭೆ ನಡೆಸಿದರು. ಸಭೆಯಲ್ಲಿ ಒಂದು ವರ್ಷದಲ್ಲಿ ಪ್ರತಿಮೆ ಕಾರ್ಯ ಪೂರ್ಣಗೊಂಡು ಮುಂದಿನ 2024ರ ನವೆಂಬರ್ 1ಕ್ಕೆ ಅನಾವರಣಗೊಳ್ಳಬೇಕು. ಮೊದಲಿಗೆ ಎರಡು ಅಡಿಯ ಕನ್ನಡಾಂಬೆಯ ಮಾದರಿ ಪ್ರತಿಮೆ ನಿರ್ಮಿಸಿ ಕೊಡಬೇಕು. ನಂತರ ತ್ರಿಡಿ ಮಾದರಿಯ ಕನ್ನಡಾಂಬೆಯ ಪ್ರತಿಮೆ ನಿರ್ಮಾಣ ಮಾಡಲಾಗುವುದು. ಈ ಬಗ್ಗೆ ತುರ್ತು ಅಗತ್ಯ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕನ್ನಡಾಂಬೆಯ ಪ್ರತಿಮೆ ನಿರ್ಮಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿನೂತನ ಯೋಜನೆ ರೂಪಿಸಿದ್ದು, ಹದಿನಾಲ್ಕು ತಿಂಗಳಲ್ಲಿ ಪ್ರತಿಮೆಗೆ ಅಂತಿಮ ಸ್ಪರ್ಶ ದೊರಕಲಿದೆ. ಭುವನೇಶ್ವರಿ ತಾಯಿಯ ಕಂಚಿನ ಪ್ರತಿಮೆ ಸ್ಥಾಪಿಸುವ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಈಗಾಗಲೇ ತಿಂಗಳಲ್ಲಿ ಎರಡು ಬಾರಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಪ್ರತಿಮೆ ನಿರ್ಮಾಣ ಸಂಬಂಧ ತುರ್ತು ಕ್ರಮವಹಿಸುವಂತೆ ಸೂಚಿಸಿದ್ದಾರೆ.

ಬೆಂಗಳೂರಿನ ಜೆ. ಸಿ ರಸ್ತೆಯಲ್ಲಿರುವ ಕನ್ನಡ ಭವನದ ಆವರಣದಲ್ಲಿ ಸುಮಾರು 25 ಅಡಿ ಎತ್ತರದ ಕನ್ನಡಾಂಬೆಯ ಕಂಚಿನ ಪ್ರತಿಮೆ ನಿರ್ಮಾಣ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ಆ ಸ್ಥಳದಲ್ಲಿ ಪ್ರವಾಸಿಗರನ್ನು ಸೆಳೆಯುವಂತಹ ನಿಟ್ಟಿನಲ್ಲಿ ಉದ್ಯಾನ ನಿರ್ಮಾಣ ಹಾಗೂ ವಿಗ್ರಹದೊಂದಿಗೆ ಕನ್ನಡ ನಾಡಿನ ಸಾಂಸ್ಕೃತಿಕ ವೈಭವ, ಗತಕಾಲದ ಹೆಮ್ಮೆಯ ವಿಷಯಗಳನ್ನು ಪ್ರತಿಬಿಂಬಿಸುವ ಚಿತ್ರಣ ಇಲ್ಲಿರಲಿದ್ದು, ಅವು ಜನರಿಗೆ ಮಾಹಿತಿ ನೀಡಲಿವೆ.

ಕಲಾವಿದ ಕೆ. ಸೋಮಶೇಖರ್ ಸಿದ್ಧಪಡಿಸಿರುವ ನಾಡದೇವಿಯ ಚಿತ್ರವನ್ನು ಅಧಿಕೃತಗೊಳಿಸುವಂತೆ ಲಲಿತಾ ಅಕಾಡೆಮಿ ಅಧ್ಯಕ್ಷ ಡಿ. ಮಹೇಂದ್ರ ಅಧ್ಯಕ್ಷತೆಯ ಸಮಿತಿಯು ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಅದೇ ಮಾದರಿಯ ನಾಡದೇವಿಯ ಸುಮಾರು 25 ಅಡಿಯ ಪ್ರತಿಮೆ ತಲೆ ಎತ್ತಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!