ಹೊಸದಿಗಂತ ಡಿಜಿಟಲ್ ಡೆಸ್ಕ್:
ಭ್ರಷ್ಟಾಚಾರದ ವಿರುದ್ಧ ರಾಜ್ಯದಲ್ಲಿ ಲೋಕಾಯುಕ್ತ ಅಧಿಕಾರಿಗಳು ಮತ್ತೆ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಮಂಗಳವಾರ ಬೆಳಿಗ್ಗೆ ಒಂದೇ ಸಮಯದಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಸರ್ಕಾರಿ ಅಧಿಕಾರಿಗಳ ಮನೆಗಳು ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದ್ದು, ಪರಿಶೀಲನೆ ಕಾರ್ಯ ನಡೆಯುತ್ತಿದೆ.
ಅಧಿಕಾರಿಗಳ ಅಕ್ರಮ ಆಸ್ತಿ ಮತ್ತು ಹಣಕಾಸು ವ್ಯವಹಾರಗಳ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಬಾಗಲಕೋಟೆ ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾಗಿರುವ ಶ್ಯಾಂ ಸುಂದರ್ ಕಾಂಬಳೆ ಅವರ ಬಾಗಲಕೋಟೆ ನಿವಾಸ ಮತ್ತು ಗದಗ ಜಿಲ್ಲೆಯ ನರಗುಂದದಲ್ಲಿರುವ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಈ ವೇಳೆ ಹಲವು ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ. ಇದೇ ಜಿಲ್ಲೆಯ ಬಾಗೇವಾಡಿಯಲ್ಲಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಪ್ಪ ಅವರ ಮನೆಯ ಮೇಲೂ ದಾಳಿ ನಡೆದಿದ್ದು, ಆಸ್ತಿಪಾಸ್ತಿ ಸಂಬಂಧಿತ ದಾಖಲೆಗಳ ಪರಿಶೀಲನೆ ಮುಂದುವರಿದಿದೆ.
ಇನ್ನು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾಗಿರುವ ಮಾರುತಿ ಯಶವಂತ ಮಾಳವಿ ಅವರ ನಿವಾಸಕ್ಕೆ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ರಾಯಚೂರು ಜಿಲ್ಲೆಯಲ್ಲೂ ಕಾರ್ಯಾಚರಣೆ ನಡೆದಿದ್ದು, ನಿವೃತ್ತ ಸಹಾಯಕ ಇಂಜಿನಿಯರ್ ವಿಜಯಲಕ್ಷ್ಮೀ ಅವರ ಶ್ರೀ ರೇಣುಕಾ ನಿಲಯದಲ್ಲಿ ಶೋಧ ನಡೆಸಲಾಗಿದೆ.
ಲೋಕಾಯುಕ್ತ ದಾಳಿಗಳು ಮುಂದುವರಿಯುವ ಸಾಧ್ಯತೆ ಇದ್ದು, ಶೋಧ ಕಾರ್ಯ ಮುಗಿದ ಬಳಿಕ ಹೆಚ್ಚಿನ ಮಾಹಿತಿ ಹೊರಬೀಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

