ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರದ ಜನವಿರೋಧಿ ಮತ್ತು ರೈತವಿರೋಧಿ ನೀತಿಯನ್ನು ಖಂಡಿಸಿ ಇಂದು ಬೆಂಗಳೂರಿನಲ್ಲಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.
ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಸಲಾಯಿತು. ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಡಿ.ವಿ.ಸದಾನಂದಗೌಡ, ಮಾಜಿ ಡಿಸಿಎಂ ಗೋವಿಂದ ಕಾರಜೋಳ, ಮಾಜಿ ಸಚಿವರಾದ ಆರ್.ಅಶೋಕ್, ಡಾ.ಸಿ.ಎನ್.ಅಶ್ವತ್ಥನಾರಾಯಣ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಬೆಂಗಳೂರಿನ ಸಂಸದರು, ಶಾಸಕರು, ಹಾಲಿ ಮಾಜಿ ಜನಪ್ರತಿನಿಧಿಗಳು ಭಾಗವಹಿಸಿದ್ದರು.
ರಾಜ್ಯದಾದ್ಯಂತ ಮಳೆ ಇಲ್ಲದೆ ಬರ ಆವರಿಸಿದೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದರೆ, ಸರಕಾರ ಸ್ಪಂದಿಸುತ್ತಿಲ್ಲ. 198ಕ್ಕಿಂತ ಹೆಚ್ಚು ತಾಲ್ಲೂಕುಗಳಲ್ಲಿ ಬರದ ದುಸ್ಥಿತಿ ಇದೆ. ಆದರೆ, ಬರಪೀಡಿತ ತಾಲ್ಲೂಕುಗಳನ್ನು ರಾಜ್ಯ ಸರಕಾರ ಇನ್ನೂ ಘೋಷಿಸಿಲ್ಲ ಹಾಗೂ ಬರ ಪರಿಹಾರ ಕಾಮಗಾರಿಗಳನ್ನು ಕೈಗೆತ್ತಿಕೊಂಡಿಲ್ಲ ಎಂದು ಬಿಜೆಪಿ ಆಕ್ಷೇಪಿಸಿದೆ.
ದರ ಕರುಗಳಿಗೆ ಕುಡಿಯುವ ನೀರೂ ಇಲ್ಲ; ಅಲ್ಲದೆ, ಮೇವೂ ಇಲ್ಲದ ಪರಿಸ್ಥಿತಿ ಇದೆ. ವಿದ್ಯುತ್ ಬಿಲ್ ದುಬಾರಿಯಾಗಿದ್ದರಿಂದ ಮಧ್ಯಮ ವರ್ಗದವರು ಪರಿತಪಿಸುತ್ತಿದ್ದಾರೆ. ಹಾಲಿನ ದರವನ್ನೂ ಹೆಚ್ಚಿಸಿದ್ದಾರೆ. ರಾಜ್ಯ ಸರಕಾರ ಜಾರಿಗೊಳಿಸಿದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದು ಮಾಡಲಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಲಾಯಿತು.
ಬಿಜೆಪಿ ಸರಕಾರ ಇದ್ದಾಗ ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯಡಿ ಹೆಚ್ಚುವರಿಯಾಗಿ 4 ಸಾವಿರ ರೂಪಾಯಿ ನೀಡಲಾಗುತ್ತಿತ್ತು. ಅದನ್ನೂ ರದ್ದು ಮಾಡಿದ್ದಾರೆ. ರಾಜ್ಯದಲ್ಲಿ ನೂರಾರು ಸಮಸ್ಯೆಗಳು ತಾಂಡವವಾಡುತ್ತಿದ್ದರೂ ಕಾಂಗ್ರೆಸ್ ಸರಕಾರವು 100 ದಿನಗಳ ಆಡಳಿತ ಅವಧಿಯಲ್ಲಿ 5 ಗ್ಯಾರಂಟಿ ಅನುಷ್ಠಾನವನ್ನೇ ವಿಷಯವನ್ನಾಗಿ ಮಾಡಿಕೊಂಡು ಸಂಭ್ರಮ ಪಡುತ್ತಿದೆ. ಸರಕಾರವು ರಾಜ್ಯದಲ್ಲಿ ಸಮಸ್ಯೆಗಳೇ ಇಲ್ಲ ಎಂಬಂತೆ ಸಂಭ್ರಮದಲ್ಲಿ ತೊಡಗಿರುವುದು ಖಂಡನಾರ್ಹ ಎಂದು ತಿಳಿಸಲಾಗಿದೆ.