ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಸಾರಿಗೆ ಸಂಘಟನೆಗಳು ಕರೆ ನೀಡಿದ್ದ ಬಂದ್ ಹಿಂಪಡೆಯಲಾಗಿದೆ. ಖಾಸಗಿ ಸಾರಿಗೆ ಚಾಲಕರ ಬೇಡಿಕೆ ಈಡೇರಿಸುವುದಾಗಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಮುಷ್ಕರವನ್ನು ಅರ್ಧಕ್ಕೆ ಕೈ ಬಿಡಲಾಗಿದೆ.
ಶಕ್ತಿ ಯೋಜನೆ ವಿರುದ್ಧ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಫ್ರೀಡಂ ಪಾರ್ಕ್ ನಲ್ಲಿ ಇಂದು ಪ್ರತಿಭಟನೆ ನಡೆಸಲಾಗಿತ್ತು. ಪ್ರತಿಭಟನಾ ಸ್ಥಳಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಭೇಟಿ ನೀಡಿ, ಖಾಸಗಿ ವಾಹನ ಚಾಲಕರ ಬೇಡಿಕೆಗಳನ್ನು ಆಲಿಸಿ ಬಳಿಕ ಮಾತನಾಡಿದರು. ಅವರ ಬಹುತೇಕ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಭರವಸೆ ನೀಡಿದರು.
ಖಾಸಗಿ ಸಾರಿಗೆ ಒಕ್ಕೂಟದ 32 ಬೇಡಿಕೆಗಳಲ್ಲಿ 27 ಬೇಡಿಕೆಗಳನ್ನು ಈಡೇರಿಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಂದ್ ಹಿಂಪಡೆಯುತ್ತಿದ್ದೇವೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.