ಹೊಸ ದಿಗಂತ ಡಿಜಿಟಲ್ ಡೆಸ್ಕ್:
2017ರ ಉನ್ನಾವ್ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಶಾಸಕ ಕುಲದೀಪ್ ಸೆಂಗಾರ್ ಅವರ ಶಿಕ್ಷೆಗೆ ದೆಹಲಿ ಹೈಕೋರ್ಟ್ ತಡೆ ನೀಡಿದೆ. ಜೀವಾವಧಿ ಶಿಕ್ಷೆಗೆ ತಡೆ ನೀಡಿ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ದೆಹಲಿ ವಿಚಾರಣಾ ನ್ಯಾಯಾಲಯವು ಡಿಸೆಂಬರ್ 2019ರಲ್ಲಿ ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಮತ್ತು ಪೋಕ್ಸೊ ಕಾಯ್ದೆಯ ಸೆಕ್ಷನ್ 5 (ಸಿ) ಮತ್ತು 6ರ ಅಡಿಯಲ್ಲಿ ಅಪ್ರಾಪ್ತ ವಯಸ್ಕಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕುಲದೀಪ್ ಸೆಂಗಾರ್ ಅವರನ್ನು ತಪ್ಪಿತಸ್ಥರೆಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು.
ಕುಲದೀಪ್ ಸಿಂಗ್ ಸೆಂಗಾರ್ ಅವರ ಜೈಲು ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಅಮಾನತುಗೊಳಿಸಿದೆ. ನ್ಯಾಯಮೂರ್ತಿಗಳಾದ ಸುಬ್ರಮಣಿಯಂ ಪ್ರಸಾದ್ ಮತ್ತು ಹರೀಶ್ ವೈದ್ಯನಾಥನ್ ಶಂಕರ್ ಅವರ ನ್ಯಾಯಪೀಠವು ಕುಲದೀಪ್ ಸೆಂಗಾರ್ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿತು. ಅದೇ ಮೊತ್ತದ 3 ಶ್ಯೂರಿಟಿಗಳೊಂದಿಗೆ 15 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಅನ್ನು ಸಲ್ಲಿಸುವಂತೆ ನಿರ್ದೇಶಿಸಿತು.
ಕುಲದೀಪ್ ಸಿಂಗ್ ಸೆಂಗಾರ್ ಅವರು ಅತ್ಯಾಚಾರಕ್ಕೊಳಗಾದ ಬಾಲಕಿಯ ಮನೆಯಿಂದ 5 ಕಿ.ಮೀ ವ್ಯಾಪ್ತಿಯಲ್ಲಿ ಓಡಾಡಬಾರದು ಮತ್ತು ಆಕೆ ಅಥವಾ ಆಕೆಯ ತಾಯಿಗೆ ಬೆದರಿಕೆ ಹಾಕಬಾರದು ಎಂದು ಹೈಕೋರ್ಟ್ ಸೆಂಗಾರ್‌ಗೆ ಸೂಚಿಸಿದೆ. ‘ಯಾವುದೇ ಷರತ್ತುಗಳನ್ನು ಉಲ್ಲಂಘಿಸಿದರೆ ಜಾಮೀನು ರದ್ದು ಮಾಡಲಾಗುವುದು’ ಎಂದು ನ್ಯಾಯಾಲಯ ಎಚ್ಚರಿಕೆ ನೀಡಿದೆ.
ಅತ್ಯಾಚಾರ ಪ್ರಕರಣದಲ್ಲಿ ಕುಲದೀಪ್ ಸೆಂಗಾರ್ ಅವರ ಅಪರಾಧ ಸಾಬೀತು ಮತ್ತು ಶಿಕ್ಷೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿಯ ವಿಚಾರಣೆ ಮುಗಿಯುವವರೆಗೆ ಅವರ ಶಿಕ್ಷೆಯನ್ನು ಹೈಕೋರ್ಟ್ ಅಮಾನತುಗೊಳಿಸಿದೆ.
ಅತ್ಯಾಚಾರ ಪ್ರಕರಣದಲ್ಲಿ ಡಿಸೆಂಬರ್ 2019ರ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಅವರು ಪ್ರಶ್ನಿಸಿದ್ದರು.

