ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಅಸ್ಸಾಂನ ಕರ್ಬಿ ಅಂಗ್ಲಾಂಗ್ ಜಿಲ್ಲೆಯಲ್ಲಿ ಮಂಗಳವಾರ ಮತ್ತೆ ಹಿಂಸಾಚಾರ ಭುಗಿಲೆದ್ದಿರುವ ಘಟನೆ ನಡೆದಿದೆ. ಪ್ರತಿಭಟನಾಕಾರರ ಎರಡು ಗುಂಪುಗಳ ನಡುವೆ ಉಂಟಾದ ಘರ್ಷಣೆಯನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದರು. ಅಶ್ರುವಾಯು ಶೆಲ್‌ಗಳನ್ನು ಬಳಸಿದರು. ಈ ಸಂದರ್ಭದಲ್ಲಿ ಸುಮಾರು ಎಂಟು ಮಂದಿ ಗಾಯಗೊಂಡಿದ್ದಾರೆ.
ಕರ್ಬಿ ಅಂಗ್ಲಾಂಗ್ ಜಿಲ್ಲೆಯ ಖೇರೋನಿ ಮಾರುಕಟ್ಟೆ ಪ್ರದೇಶದಲ್ಲಿ ಸೋಮವಾರ ಬುಡಕಟ್ಟು ಪ್ರದೇಶದಲ್ಲಿ ಅತಿಕ್ರಮಣಕಾರರನ್ನು ತೆರವುಗೊಳಿಸುವಂತೆ ಒತ್ತಾಯಿಸಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಮಹಿಳೆಯರು, ಮಕ್ಕಳು ಸೇರಿದಂತೆ ಹೆಚ್ಚಿನವರು ಅಂಗಡಿಗಳಿಗೆ ಬೆಂಕಿ ಹಚ್ಚಿದರು. ಈ ವೇಳೆ ಎರಡೂ ಗುಂಪುಗಳು ಉದ್ರಿಕ್ತಗೊಂಡು ಘರ್ಷಣೆಯಲ್ಲಿ ತೊಡಗಿತ್ತು.
ಪರಿಸ್ಥಿತಿ ನಿಯಂತ್ರಣ ತಪ್ಪಿದ್ದರಿಂದ ಪೊಲೀಸರು ಲಾಠಿಚಾರ್ಜ್ ನಡೆಸಿದರು, ಎರಡೂ ಗುಂಪುಗಳ ಪ್ರತಿಭಟನಾಕಾರರನ್ನು ಚದುರಿಸಲು ಅಶ್ರುವಾಯು ಶೆಲ್‌ಗಳನ್ನು ಹಾರಿಸಿದರು. ಪರಿಸ್ಥಿತಿ ಉದ್ವಿಗ್ನಗೊಂಡಿದ್ದರಿಂದ ಹೆಚ್ಚಿನ ಪೊಲೀಸ್ ಪಡೆಗಳನ್ನು ಸ್ಥಳಕ್ಕೆ ಕರೆಸಲಾಯಿತು.
ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಕರ್ಬಿ ಆಂಗ್ಲಾಂಗ್‌ನಲ್ಲಿನ ಪರಿಸ್ಥಿತಿ ತುಂಬಾ ಸೂಕ್ಷ್ಮವಾಗಿತ್ತು. ಹಿರಿಯ ಸಚಿವ ರನೋಜ್ ಪೆಗು ಜಿಲ್ಲೆಯಲ್ಲಿದ್ದಾರೆ. ಈ ವಿಷಯ ಶೀಘ್ರದಲ್ಲೇ ಬಗೆಹರಿಯುತ್ತದೆ ಎಂದು ನಾನು ನಂಬುತ್ತೇನೆ ಎಂದು ತಿಳಿಸಿದ್ದಾರೆ.

