ಮುಂದಿನ 15 ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯುಸೆಕ್ ನೀರು ಹರಿಸಬೇಕು: ಸುಪ್ರೀಂ ಕೋರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಲ್ಲಿ ಇಂದು ಮಹತ್ವದ ವಿಚಾರಣೆ ನಡೆದಿದ್ದು, ಕರ್ನಾಟಕವು ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ 5,000 ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ಈ ಮೂಲಕ ಕಾವೇರಿ ನಿಯಂತ್ರಣ ಆಯೋಗ ಮತ್ತು ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶ ಎತ್ತಿಹಿಡಿದಿದೆ.

ಕರ್ನಾಟಕದಲ್ಲಿ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ. ಆದರೆ ತಮಿಳುನಾಡು ನಮಗೆ ನೀರು ಹರಿಸಿ ಎಂದು ಪಟ್ಟು ಹಿಡಿದಿದೆ. ಈ ಬಗ್ಗೆ ಕರ್ನಾಟಕ ಹಾಗೂ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದವು. ಸುಪ್ರೀಂ ಕೋರ್ಟ್‌ನಲ್ಲಿ ಇಂದು ಬೆಳಗ್ಗೆ 10.30ಕ್ಕೆ ವಿಚಾರಣೆ ಆರಂಭಗೊಂಡಿತು. ತಮಿಳುನಾಡು ಪರ ವಕೀಲರಾದ ಮುಕುಲ್​ ರೋಹಟಗಿ ಮತ್ತು ಕರ್ನಾಟಕದ ಪರ ವಕೀಲ ಶ್ಯಾಮ್​ ದಿವಾನ್​ ತಮ್ಮ ವಾದಗಳನ್ನು ಮಂಡಿಸಿದರು.

ನೀರಿನ ಸಂಕಷ್ಟ ಇದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಆದರೆ, ಸಂಕಷ್ಟ ಸೂತ್ರವನ್ನು ಕರ್ನಾಟಕ ಪಾಲಿಸುತ್ತಿಲ್ಲ. ನಾವು ಕಡಿಮೆ ನೀರನ್ನು ಪಡೆಯುತ್ತಿದ್ದೇವೆ ಎಂದು ತಮಿಳುನಾಡು ಪರ ವಕೀಲ ಮುಕುಲ್​ ರೋಹಟಗಿ ವಾದ ಮಂಡಿಸಿದರು.

ಕರ್ನಾಟಕ ಪರ ವಾದ ಮಂಡಿಸಿದ ಶ್ಯಾಮ್​ ದಿವಾನ್​, ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ಆದೇಶವನ್ನು ನಾವು ಪಾಲಿಸುತ್ತಿದ್ದೇವೆ ಎಂದರು.

ವಾದ-ವಿವಾದಗಳನ್ನು ಆಲಿಸಿದ ಬಳಿಕ ನ್ಯಾಯಮೂರ್ತಿ ಬಿ.ಆರ್ ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ತಮಿಳುನಾಡಿಗೆ ನೀರು ಹರಿಸಲು ಆದೇಶ ಹೊರಡಿಸಿದೆ.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ) ನೀಡಿರುವ ಆದೇಶದಂತೆ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಕರ್ನಾಟಕ 5,000 ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂ ಕೋರ್ಟ್‌ ತೀರ್ಪು ನೀಡಿದೆ. ಅಲ್ಲದೆ 15 ದಿನಗಳ ನಂತರ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here