ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನ ಪ್ರಸಿದ್ಧ ದೇವಸ್ಥಾನವೊಂದಕ್ಕೆ ತೆರಳಿ ಭಕ್ತಿಯಿಂದ ದರ್ಶನ ಪಡೆದು ಸಂಭ್ರಮದಿಂದ ಮನೆಗೆ ಮರಳುತ್ತಿದ್ದ ಕುಟುಂಬವೊಂದಕ್ಕೆ ವಿಧಿ ಕ್ರೂರವಾಗಿ ಎರಗಿದೆ. ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ದೇವಿನಗರ ಕ್ಯಾಂಪ್ ಬಳಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ನಿಟ್ಟೂರು ಗ್ರಾಮದ ಪ್ರಸಾದ್ ರಾವ್ ಹಾಗೂ ಇಬ್ಬರು ಮಹಿಳೆಯರು ಅಪಘಾತದ ತೀವ್ರತೆಗೆ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಬಳ್ಳಾರಿ-ಸಿರುಗುಪ್ಪ ರಾಜ್ಯ ಹೆದ್ದಾರಿಯಲ್ಲಿ ಮುಂಜಾನೆ ಸುಮಾರು 5 ಗಂಟೆಯ ವೇಳೆಗೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಕಟ್ಟೆಗೆ ವೇಗವಾಗಿ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅತಿವೇಗವೇ ಈ ದುರ್ಘಟನೆಗೆ ಕಾರಣವಿರಬಹುದು ಎಂದು ಪ್ರಾಥಮಿಕವಾಗಿ ಅಂದಾಜಿಸಲಾಗಿದೆ.
ಕಾರಿನಲ್ಲಿದ್ದ ಇತರ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.
ವಿಷಯ ತಿಳಿಯುತ್ತಿದ್ದಂತೆಯೇ ಸಿರುಗುಪ್ಪ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಖಕರವಾಗಿ ಮುಗಿಯಬೇಕಿದ್ದ ಯಾತ್ರೆ ಹೀಗೆ ರಕ್ತಸಿಕ್ತವಾಗಿ ಅಂತ್ಯಗೊಂಡಿರುವುದು ನಿಟ್ಟೂರು ಗ್ರಾಮದಲ್ಲಿ ಶೋಕದ ಛಾಯೆ ಮೂಡಿಸಿದೆ.

