ಹೊಸ ದಿಗಂತ ವರದಿ, ಕಾರವಾರ:
ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಗುತ್ತಿಗೆದಾರರೋರ್ವರ ಮನೆಯಲ್ಲಿ ನಡೆದ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ 42 ಕೋಟಿ ರೂಪಾಯಿ ಅಕ್ರಮ ಹಣ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾರವಾರದಲ್ಲಿ ಭಾರತೀಯ ಜನತಾ ಪಕ್ಷದ ನಗರ ಮತ್ತು ಗ್ರಾಮೀಣ ಘಟಕಗಳ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಕಾರವಾರ ಅಂಕೋಲಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ನಾಯ್ಕ ಮಾತನಾಡಿ ರಾಜ್ಯದ ಜನತೆಗೆ ಗ್ಯಾರಂಟಿಗಳ ಆಶೆ ತೋರಿಸಿ ರಾಜ್ಯವನ್ನು ಅಧೋಗತಿಗೆ ಒಯ್ಯುವ ಕೆಲಸದಲ್ಲಿ ಕಾಂಗ್ರೆಸ್ ಸರ್ಕಾರ ತೊಡಗಿಕೊಂಡಿದೆ ಎಂದರು.
ಬೆಲೆ ಏರಿಕೆಯಿಂದ ಜನಸಾಮಾನ್ಯರು ಬದುಕು ನಡೆಸುವುದು ಕಷ್ಟಕರವಾಗಿದೆ, ರೈತರಿಗೆ ಸಿಗಬೇಕಾದ ಸವಲತ್ತುಗಳಿಂದ ವಂಚಿಸಿ ಅನ್ಯಾಯ ಮಾಡಲಾಗಿದೆ, ಭ್ರಷ್ಟಾಚಾರ ಮಿತಿ ಮೀರಿದೆ ಎಂದರು.
ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇರುವಾಗ 40 ಪರ್ಸಂಟೇಜ್ ಆರೋಪ ಮಾಡಿದ್ದ ಸಮಾಜ ಸೇವಕ ಈಗ ಎಲ್ಲಿದ್ದಾರೆ ಎಂದು ಅವರು ವ್ಯಂಗ್ಯವಾಡಿದರು.
ಜಿಲ್ಲಾ ಬಿಜೆಪಿ ವಕ್ತಾರ ನಾಗರಾಜ ನಾಯಕ ಮಾತನಾಡಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕಾರವಾರ ಅಂಕೋಲಾ ಕ್ಷೇತ್ರದಲ್ಲಿ ಅಕ್ರಮ ದಂಧೆಗಳು ರಾಜಾರೋಷವಾಗಿ ನಡೆಯತೊಡಗಿದೆ ಬಿಜೆಪಿ ಮೇಲೆ ಪರ್ಸಂಟೇಜ್ ಆರೋಪ ಮಾಡಿದವರು ಈಗ ಅದೇ ಕಮಿಶನ್ ವ್ಯವಹಾರಗಳಲ್ಲಿ ತೊಡಗಿಕೊಂಡಿರುವುದನ್ನು ಜನರು ಆಡಿಕೊಳ್ಳುವಂತಾಗಿದೆ ಎಂದರು.
ನ್ಯಾಯವಾದಿ ಸಂಜಯ ಸಾಳುಂಕೆ ಮಾತನಾಡಿದರು.
ಕಾರವಾರ ನಗರ ಮತ್ತು ಗ್ರಾಮೀಣ ಬಿಜೆಪಿ ಅಧ್ಯಕ್ಷರು ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.