ಹೊಸದಿಗಂತ ಡಿಜಿಟಲ್ ಡೆಸ್ಕ್:
ಉನ್ನಾವ್ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ಕುಟುಂಬದೊಂದಿಗೆ ಹಲವಾರು ಮಹಿಳಾ ಹಕ್ಕುಗಳ ಕಾರ್ಯಕರ್ತರು ಶುಕ್ರವಾರ ದೆಹಲಿ ಹೈಕೋರ್ಟ್ ಹೊರಗೆ ಜಮಾಯಿಸಿ ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್ ಶಿಕ್ಷೆಯನ್ನು ಅಮಾನತುಗೊಳಿಸಿದ ನ್ಯಾಯಾಲಯದ ಆದೇಶವನ್ನು ಪ್ರತಿಭಟಿಸಿದರು.
ಪ್ರತಿಭಟನೆ ಆರಂಭವಾಗುತ್ತಿದ್ದಂತೆಯೇ ಪೊಲೀಸರು ಮಧ್ಯಪ್ರವೇಶಿಸಿ, ಹೈಕೋರ್ಟ್ ಆವರಣದಲ್ಲಿ ಹಾಗೂ ಪ್ರವೇಶದ್ವಾರಗಳ ಬಳಿ ಯಾವುದೇ ಪ್ರತಿಭಟನೆಗೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು. ಇದರಿಂದ ಕೆಲಕಾಲ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿಯ ನಡುವೆ ಮಾತಿನ ಚಕಮಕಿ ನಡೆಯಿತು. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪ್ರತಿಭಟನಾಕಾರರನ್ನು ಸ್ಥಳದಿಂದ ತೆರಳುವಂತೆ ಪೊಲೀಸರು ಸೂಚಿಸಿದರು.
ಪ್ರತಿಭಟನಾಕಾರರು, ಸೆಂಗಾರ್‌ಗೆ ನೀಡಿರುವ ರಿಯಾಯಿತಿ ನ್ಯಾಯದ ತತ್ವಗಳಿಗೆ ವಿರುದ್ಧವಾಗಿದ್ದು, ಇದು ಸಂತ್ರಸ್ತೆಯ ನ್ಯಾಯಕ್ಕಾಗಿ ನಡೆದ ಹೋರಾಟಕ್ಕೆ ಧಕ್ಕೆ ತರುತ್ತದೆ ಎಂದು ಆರೋಪಿಸಿದರು. ಇಂತಹ ತೀರ್ಪುಗಳು ಸಮಾಜಕ್ಕೆ ತಪ್ಪು ಸಂದೇಶ ನೀಡುತ್ತವೆ ಎಂಬುದನ್ನೂ ಅವರು ಉಲ್ಲೇಖಿಸಿದರು.
ಇದನ್ನೂ ಓದಿ:
ಪೊಲೀಸರು ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಂಡು, ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಟ್ಟರು. ಬಳಿಕ ಪ್ರತಿಭಟನಾಕಾರರು ಹೈಕೋರ್ಟ್ ಪ್ರದೇಶದಿಂದ ನಿಧಾನವಾಗಿ ತೆರಳಿದರು. ಈ ಘಟನೆಯಿಂದ ಕೆಲಕಾಲ ನ್ಯಾಯಾಲಯದ ಹೊರಭಾಗದಲ್ಲಿ ಗೊಂದಲದ ವಾತಾವರಣ ಕಂಡುಬಂದಿತು.

