ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಇಂದು ದೆಹಲಿಯ ಕಾಂಗ್ರೆಸ್ ಕಚೇರಿ ‘ಇಂದಿರಾ ಭವನ’ದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಆಯೋಜನೆಯಾಗಿದೆ. ಈ ಮಹತ್ವದ ಸಭೆಯಲ್ಲಿ ಭಾಗವಹಿಸಲು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ರಾಷ್ಟ್ರ ರಾಜಧಾನಿಗೆ ತಲುಪಿದ್ದಾರೆ.
ಮುಂಬರುವ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗಳಿಗೆ ರಣತಂತ್ರ ರೂಪಿಸುವುದು ಈ ಸಭೆಯ ಪ್ರಮುಖ ಉದ್ದೇಶವಾಗಿದೆ. ಇದರೊಂದಿಗೆ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿರುವ ‘ವೋಟ್ ಚೋರಿ’ ಹಗರಣ, ನ್ಯಾಷನಲ್ ಹೆರಾಲ್ಡ್ ಪ್ರಕರಣ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ರಾಷ್ಟ್ರವ್ಯಾಪಿ ಹೋರಾಟ ರೂಪಿಸುವ ಬಗ್ಗೆ ಈ ಸಭೆಯಲ್ಲಿ ಗಂಭೀರ ಚರ್ಚೆ ನಡೆಯುವ ಸಾಧ್ಯತೆಯಿದೆ.
ಕಾರ್ಯಕಾರಿ ಸಮಿತಿ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಪ್ರತ್ಯೇಕವಾಗಿ ಭೇಟಿ ಮಾಡುವ ಸಾಧ್ಯತೆಯಿದೆ. ಈ ವೇಳೆ ರಾಜ್ಯ ರಾಜಕಾರಣದ ಬೆಳವಣಿಗೆಗಳು ಹಾಗೂ ಆಡಳಿತಾತ್ಮಕ ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

