ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಲ ದಿನಗಳಿಂದ ನಡೆಯುತ್ತಿರುವ ಮರಾಠ ಮೀಸಲಾತಿ ಹೋರಾಟ ಉಗ್ರರೂಪ ಪಡೆದಿದ್ದು, ಪ್ರತಿಭಟನಾಕಾರರು ಕಂಡಕಂಡಲ್ಲಿ ಬೆಂಕಿ ಹಚ್ಚುತ್ತಿದ್ದಾರೆ. ಪರಿಸ್ಥಿತಿ ನಿಯಂತ್ರಿಸುವ ಸಲುವಾಗಿ ಮಹಾರಾಷ್ಟ್ರದಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದು, ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.
ಇತ್ತ ಹೋರಾಟದ ನೇತೃತ್ವ ವಹಿಸಿರುವ ಮನೋಜ್ ಜಾರಂಗೆ ಕಳೆದೊಂದು ವಾರದಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಮನೋಜ್ ಜಾರಂಗೆ ಅವರ ಆರೋಗ್ಯ ಹದಗೆಟ್ಟಿದ್ದರಿಂದ ಪ್ರತಿಭಟನಾಕಾರರ ಆಕ್ರೋಶ ಹೆಚ್ಚಾಗಿದೆ. ಮುಖ್ಯಮಂತ್ರಿ ಶಿಂಧೆ ವಿರುದ್ಧ ವಾಗ್ದಾಳಿ ನಡೆಸಿದ್ದು, ಜಾರಂಜೆ ಅವರ ಸ್ಥಿತಿ ಬಗ್ಗೆ ಸಿಎಂ ಗಮನಹರಿಸಿಲ್ಲ ಎಂದು ಆರೋಪಿಸಿದರು.
ಶಾಸಕರ ನಿವಾಸ, ಕಚೇರಿ, ಅಂಗಡಿಗಳಿಗೆ ಬೆಂಕಿ ಹಚ್ಚುತ್ತಿದ್ದಾರೆ. ಇದರಿಂದ ಮಹಾರಾಷ್ಟ್ರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಧಿಕಾರಿಗಳು ಸೆಕ್ಷನ್ 144 ಜಾರಿಗೊಳಿಸಿ, ಇಂಟರ್ನೆಟ್ ಸೇವೆಯನ್ನೂ ಸ್ಥಗಿತಗೊಳಿಸಿದ್ದಾರೆ. ಮಹಾರಾಷ್ಟ್ರದ ಬೀಡ್ ನಗರ ಹೋರಾಟದ ಕೇಂದ್ರವಾಗಿ ಬದಲಾಗಿದೆ.