ಹೊಸದಿಗಂತ ವರದಿ,ಕುಶಾಲನಗರ:
ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸವನತ್ತೂರು ಗ್ರಾಮದ ಕೃಷಿ ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಗಿಡ ಬೆಳೆದಿದ್ದ ಪ್ರಕರಣವೊಂದನ್ನು ಭೇದಿಸಿರುವ ಕುಶಾಲನಗರ ಗ್ರಾಮಾಂತರ ಪೊಲೀಸರು, ಮಾಲನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣ ಬಯಲಾಗುತ್ತಿದ್ದಂತೆಯೇ ಆರೋಪಿ ತಲೆಮರೆಸಿಕೊಂಡಿದ್ದಾನೆ.
ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟ ಮತ್ತು ಬಳಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಸೋಮವಾರಪೇಟೆ ಉಪವಿಭಾಗದ ಡಿವೈಎಸ್ಪಿ ಆರ್.ವಿ. ಗಂಗಾಧರಪ್ಪ ಮತ್ತು ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಪಿ. ಮೋಹನ್ ರಾಜು ಹಾಗೂ ಸಿಬ್ಬಂದಿಗಳನ್ನೊಳಗೊಂಡ ತಂಡವನ್ನು ರಚಿಸಲಾಗಿತ್ತು.
ಈ ತಂಡವು ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ಬುಧವಾರ ಸಂಜೆ ಬಸವನತ್ತೂರು ಗ್ರಾಮದ ಹಾಗಲಕಾಯಿ ರಾಜ ಎಂಬಾತ ಕೃಷಿ ಜಮೀನಿನಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾ ಗಿಡಗಳನ್ನು ಮಾರಾಟ ಮಾಡುವ ಉದ್ದೇಶದಿಂದ ಬೆಳೆದಿದ್ದ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ಮಾಡಿ 1 ಕೆ.ಜಿಗೂ ಹೆಚ್ಚು ಹಸಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ತನಿಖೆ ಕೈಗೊಳ್ಳಲಾಗಿದೆ. ಈ ಪ್ರಕರಣದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಪೊಲೀಸ್ ಅಧಿಕಾರಿಗಳನ್ನು ಹಾಗೂ ಸಿಬ್ಬಂದಿಯವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ.