ಹೊಸದಿಗಂತ ಡಿಜಿಟಲ್ ಡೆಸ್ಕ್:
ಶ್ರೀಲಂಕಾ ವಿರುದ್ಧದ ಐದು ಪಂದ್ಯಗಳ ಮಹಿಳಾ ಟಿ20 ಸರಣಿಯಲ್ಲಿ ಭಾರತ ತಂಡ ತನ್ನ ಪ್ರಾಬಲ್ಯವನ್ನು ಮುಂದುವರಿಸಿಕೊಂಡಿದೆ. ತಿರುವನಂತಪುರದಲ್ಲಿ ನಡೆದ ಮೂರನೇ ಟಿ20 ಪಂದ್ಯವನ್ನು 8 ವಿಕೆಟ್‌ಗಳಿಂದ ಗೆದ್ದುಕೊಂಡ ಟೀಂ ಇಂಡಿಯಾ, ಇನ್ನೂ ಎರಡು ಪಂದ್ಯಗಳು ಬಾಕಿ ಇರುವಂತೆಯೇ ಸರಣಿಯನ್ನು 3-0 ಅಂತರದಿಂದ ವಶಪಡಿಸಿಕೊಂಡಿದೆ. ಈ ಗೆಲುವಿನೊಂದಿಗೆ ಆತಿಥೇಯರು ಸರಣಿಯಲ್ಲಿ ಅಜೇಯ ಮುನ್ನಡೆ ಸಾಧಿಸಿದ್ದಾರೆ.
ಈ ಪಂದ್ಯದಲ್ಲಿ ಭಾರತದ ಗೆಲುವಿಗೆ ಆಲ್‌ರೌಂಡರ್ ದೀಪ್ತಿ ಶರ್ಮಾ ಪ್ರಮುಖ ಪಾತ್ರವಹಿಸಿದರು. ಶ್ರೇಷ್ಠ ಬೌಲಿಂಗ್ ಪ್ರದರ್ಶನ ನೀಡಿದ ಅವರು ಮೂರು ಪ್ರಮುಖ ವಿಕೆಟ್‌ಗಳನ್ನು ಕಬಳಿಸಿ ಶ್ರೀಲಂಕಾ ಬ್ಯಾಟಿಂಗ್ ಸಾಲನ್ನು ಕುಸಿತಕ್ಕೆ ತಳ್ಳಿದರು. ಈ ಸಾಧನೆಯೊಂದಿಗೆ ದೀಪ್ತಿ ಶರ್ಮಾ ಅಂತಾರಾಷ್ಟ್ರೀಯ ಮಹಿಳಾ ಟಿ20 ಕ್ರಿಕೆಟ್‌ನಲ್ಲಿ ಅಪರೂಪದ ದಾಖಲೆಯನ್ನು ತಮ್ಮ ಹೆಸರಿಗೆ ಬರೆಸಿಕೊಂಡಿದ್ದಾರೆ.
ಇದನ್ನೂ ಓದಿ:
ದೀಪ್ತಿ ಶರ್ಮಾ ಇದೀಗ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 1,000 ರನ್‌ಗಳೊಂದಿಗೆ 150ಕ್ಕೂ ಅಧಿಕ ವಿಕೆಟ್‌ಗಳನ್ನು ಪಡೆದ ವಿಶ್ವದ ಮೊದಲ ಮಹಿಳಾ ಕ್ರಿಕೆಟರ್ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಇದುವರೆಗೆ ಮಹಿಳಾ ಟಿ20 ಕ್ರಿಕೆಟ್‌ನಲ್ಲಿ 150ಕ್ಕೂ ಹೆಚ್ಚು ವಿಕೆಟ್ ಪಡೆದಿರುವವರು ಕೇವಲ ಇಬ್ಬರು ಮಾತ್ರ. ಆಸ್ಟ್ರೇಲಿಯಾದ ಮೇಗನ್ ಶುಟ್ 123 ಪಂದ್ಯಗಳಲ್ಲಿ 151 ವಿಕೆಟ್‌ಗಳನ್ನು ಪಡೆದಿದ್ದರೆ, ದೀಪ್ತಿ ಶರ್ಮಾ 131 ಪಂದ್ಯಗಳಲ್ಲಿ 151 ವಿಕೆಟ್‌ಗಳನ್ನು ಕಬಳಿಸುವ ಮೂಲಕ ಆ ದಾಖಲೆಯನ್ನು ಸಮಗೊಳಿಸಿದ್ದಾರೆ.
ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಸತತ ಪ್ರದರ್ಶನ ನೀಡುತ್ತಿರುವ ದೀಪ್ತಿ ಶರ್ಮಾ ಅವರ ಈ ಮೈಲಿಗಲ್ಲು, ಭಾರತೀಯ ಮಹಿಳಾ ಕ್ರಿಕೆಟ್‌ಗೆ ಮತ್ತೊಂದು ಹೆಮ್ಮೆಯ ಕ್ಷಣವಾಗಿ ದಾಖಲಾಗಿದೆ.

