ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ವಿವಿಧ ಭಾಗಗಳಲ್ಲಿ ಚಳಿಯ ತೀವ್ರತೆ ದಿನೇದಿನೇ ಹೆಚ್ಚುತ್ತಿದ್ದು, ಮಳೆಯಿಲ್ಲದ ಒಣ ಹವೆಯ ವಾತಾವರಣ ಮುಂದುವರಿದಿದೆ. ಕರಾವಳಿ ಜಿಲ್ಲೆಗಳು ಸೇರಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲೂ ಇಂದು ಚಳಿ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ರಾಜಧಾನಿ ಬೆಂಗಳೂರಿನಲ್ಲಿ ಬೆಳಗಿನ ಸಮಯದಲ್ಲಿ ದಟ್ಟ ಮಂಜು ಆವರಿಸುವ ಸಾಧ್ಯತೆ ಇದ್ದು, ಸಾರ್ವಜನಿಕರು ಎಚ್ಚರಿಕೆಯಿಂದಿರಬೇಕೆಂದು ಸೂಚಿಸಲಾಗಿದೆ.
ಬೆಂಗಳೂರಿನಲ್ಲಿ ಶೀತದ ಪ್ರಭಾವದಿಂದಾಗಿ ದಿನದ ಆರಂಭವೇ ಮಂಜಿನೊಂದಿಗೆ ಕಾಣಿಸಿಕೊಳ್ಳಲಿದೆ. ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್‌ವರೆಗೆ ಇಳಿಯುವ ಸಾಧ್ಯತೆ ಇದ್ದು, ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದೆ. ಚಳಿಯಿಂದ ಆರೋಗ್ಯ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇರುವುದರಿಂದ ಮಕ್ಕಳೂ ಹಾಗೂ ಹಿರಿಯ ನಾಗರಿಕರೂ ಹೆಚ್ಚುವರಿ ಮುನ್ನೆಚ್ಚರಿಕೆ ವಹಿಸಬೇಕೆಂದು ವೈದ್ಯರು ಸಲಹೆ ನೀಡಿದ್ದಾರೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ಮೈಸೂರು, ಚಾಮರಾಜನಗರ, ತುಮಕೂರು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಮುಂದುವರಿಯಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲೂ ಮಳೆಯಿಲ್ಲದೆ ಒಣ ಹವೆಯೇ ಇರಲಿದೆ.

