ಹೊಸದಿಗಂತ ಡಿಜಿಟಲ್ ಡೆಸ್ಕ್:
ಹರಿಯಾಣದ ಯಮುನಾಗರದಲ್ಲಿ ನಕಲಿ ಮದ್ಯ ಸೇವನೆಯಿಂದ ಆರು ಮಂದಿ ಮೃತಪಟ್ಟಿದ್ದಾರೆಂದು ಶಂಕಿಸಲಾಗಿದೆ.
ಮಂಡೇಬರಿ ಹಾಗೂ ಪಂಜೇತಾದ ಮಜ್ರಾ ಹಳ್ಳಿಯಲ್ಲಿ ಮದ್ಯ ಸೇವಿಸಿದ ಬಳಿಕ ಏಕಾಏಕಿ ವಾಂತಿ ಮಾಡಿಕೊಂಡಿದ್ದಾರೆ. ವಾಂತಿ ಮಾಡಿಕೊಂಡ ಸ್ವಲ್ಪ ಸಮಯದಲ್ಲೇ ಐವರು ಮೃತಪಟ್ಟಿದ್ದು, ಮದ್ಯ ಸೇವಿಸಿದ ಇನ್ನೂ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರಲ್ಲಿ ಒಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಸುರೇಶ್ ಕುಮಾರ್, ಸೋನು, ಸುರೀಂದರ್ ಪಾಲ್, ಸ್ವರಣ್ ಸಿಂಗ್ ಹಾಗೂ ಮೆಹರ್ ಚಂದ್ ಮೃತರು. ಕುಟುಂಬದವರು ಮರಣೋತ್ತರ ಪರೀಕ್ಷೆಗೆ ಅವಕಾಶ ನೀಡದೇ ಅಂತ್ಯ ಸಂಸ್ಕಾರ ಮಾಡಿ ಮುಗಿಸಿದ್ದಾರೆ.
ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಮರಣೋತ್ತರ ಪರೀಕ್ಷೆ ಆಗದ ಕಾರಣ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.