ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬೈಪಾಸ್ ರಸ್ತೆಯಲ್ಲಿ ಶನಿವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಪ್ಪತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಲಾರಿಯ ಹಿಂಬದಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಬಸ್ ಚಾಲಕನಿಗೆ ಗಂಭೀರ ಗಾಯಗಳಾಗಿವೆ.
ಬೆಂಗಳೂರಿನಿಂದ ಹಾಸನದತ್ತ ಸಾಗುತ್ತಿದ್ದ ಲಾರಿ ಮತ್ತು ಖಾಸಗಿ ಬಸ್ ಒಂದೇ ದಿಕ್ಕಿನಲ್ಲಿ ಸಂಚರಿಸುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಅಪಘಾತ ಸಂಭವಿಸಿದ ವೇಳೆ ಖಾಸಗಿ ಬಸ್‌ನಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಡಿಕ್ಕಿಯ ತೀವ್ರತೆಯಿಂದಾಗಿ ಬಸ್‌ನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಹಲವು ಪ್ರಯಾಣಿಕರು ಬಸ್ಸಿನೊಳಗೆ ಸಿಲುಕಿಕೊಂಡಿದ್ದರು. ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ಹೊರತೆಗೆದು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ:
ಗಾಯಗೊಂಡವರಲ್ಲಿ 13 ಮಂದಿಗೆ ಹಾಸನ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಉಳಿದ ಗಾಯಾಳುಗಳನ್ನು ಚನ್ನರಾಯಪಟ್ಟಣ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗಿದೆ. ಹೆಚ್ಚಿನವರ ಸ್ಥಿತಿ ಸ್ಥಿರವಾಗಿದ್ದು, ಚಾಲಕನ ಆರೋಗ್ಯದ ಮೇಲೆ ವೈದ್ಯರು ನಿಗಾ ವಹಿಸಿದ್ದಾರೆ.
ಘಟನೆಯ ಮಾಹಿತಿ ತಿಳಿದ ತಕ್ಷಣ ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

