ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಉನ್ನಾವೋದಲ್ಲಿ ಅಪ್ರಾಪ್ತೆಯ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಬಿಜೆಪಿ ಉಚ್ಚಾಟಿತ ಮಾಜಿ ಶಾಸಕ ಕುಲದೀಪ್ ಸೆಂಗಾರ್‌ಗೆ ದೆಹಲಿ ಹೈಕೋರ್ಟ್ ನೀಡಿದ್ದ ರಿಲೀಫ್‌ಗೆ ಸುಪ್ರೀಂ ಕೋರ್ಟ್ ಬ್ರೇಕ್ ಹಾಕಿದೆ. ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ ಜಾಮೀನು ನೀಡಿದ್ದ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.
ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಿಸಿದ ನ್ಯಾಯಾಲಯ, ಸೆಂಗಾರ್‌ಗೆ ನಾಲ್ಕು ವಾರಗಳ ನೋಟಿಸ್ ಜಾರಿ ಮಾಡಿದೆ. ಈ ಪ್ರಕರಣದಲ್ಲಿ ಉನ್ನಾವೋ ಅತ್ಯಾಚಾರ ಸಂತ್ರಸ್ತೆಗೂ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.
ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆ ಅಮಾನತುಗೊಂಡಿದ್ದರೂ, ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವಿನ ಪ್ರಕರಣದಲ್ಲಿ ಸೆಂಗಾರ್‌ಗೆ ವಿಧಿಸಲಾದ 10 ವರ್ಷಗಳ ಶಿಕ್ಷೆ ಮುಂದುವರಿದಿರುವುದರಿಂದ ಅವರು ಜೈಲಿನಿಂದ ಹೊರಬರಲು ಸಾಧ್ಯವಿಲ್ಲ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.
2017ರಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ, ದೆಹಲಿಯ ವಿಶೇಷ ನ್ಯಾಯಾಲಯವು 2019ರಲ್ಲಿ ಕುಲದೀಪ್ ಸೆಂಗಾರ್‌ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಬಳಿಕ ಡಿಸೆಂಬರ್ 23ರಂದು ದೆಹಲಿ ಹೈಕೋರ್ಟ್ ಶಿಕ್ಷೆಯನ್ನು ಅಮಾನತುಗೊಳಿಸಿ ಜಾಮೀನು ನೀಡಿತ್ತು. ಈ ಆದೇಶ ದೇಶಾದ್ಯಂತ ಭಾರೀ ಚರ್ಚೆ ಮತ್ತು ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ಸುಪ್ರೀಂ ಕೋರ್ಟ್ ಮಧ್ಯಪ್ರವೇಶದಿಂದಾಗಿ ಹೈಕೋರ್ಟ್ ನೀಡಿದ್ದ ರಿಲೀಫ್‌ಗೆ ತಾತ್ಕಾಲಿಕ ತಡೆ ಬಿದ್ದಿದೆ.

