ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿಗೆ ಪ್ರಚಂಡ ಬಹುಮತ : ಕೇಂದ್ರ ಸಚಿವ ಭಗವಂತ್‌ಖೂಬ ಭವಿಷ್ಯ

ಹೊಸ ದಿಗಂತ ವರದಿ, ಚಿತ್ರದುರ್ಗ:

ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಪ್ರಚಂಡ ಬಹುಮತ ಸಿಗಲಿದೆ ಎಂದು ಕೇಂದ್ರ ಸರ್ಕಾರದ ರಸಾಯನಿಕ ಮತ್ತು ರಸಗೊಬ್ಬರ ರಾಜ್ಯ ಸಚಿವ ಭಗವಂತ್‌ಖೂಬ ಭವಿಷ್ಯ ನುಡಿದರು.

ಬೆಂಗಳೂರಿನಿಂದ ಹುಬ್ಬಳ್ಳಿಗೆ ಹೊರಟಿದ್ದ ಭಗವಂತ್‌ಖೂಬ ಮಾರ್ಗ ಮಧ್ಯೆ ನಗರದ ಹೊರವಲಯ ಸೀಬಾರದ ಸಮೀಪವಿರುವ ಮೇದಾರ ಕೇತೇಶ್ವರ ಮಠಕ್ಕೆ ಶುಕ್ರವಾರ ಭೇಟಿ ನೀಡಿ ಸ್ವಾಮೀಜಿಗಳಿಂದ ಆಶೀರ್ವಾದ ಪಡೆದ ನಂತರ ಸುದ್ದಿಗಾರರ ಜೊತೆ ಅವರು ಮಾತನಾಡಿದರು.

ಕರ್ನಾಟಕ ವಿಧಾನಸಭೆ ಚುನಾವಣಾ ಪೂರ್ವದಲ್ಲಿಯೇ ಜನತೆಗೆ ಐದು ಉಚಿತ ಗ್ಯಾರೆಂಟಿಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಖರಾ ದೇಶದ ಬೇರೆ ಬೇರೆ ರಾಜ್ಯಗಳ ಜನತೆಗೂ ಗೊತ್ತಾಗಿರುವುದರಿಂದ ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹೀನಾಯ ಸೋಲಾಗಲಿದೆ ಎಂದರು.

ಸುಳ್ಳು ಗ್ಯಾರೆಂಟಿಗಳಿಂದ ಕರ್ನಾಟಕದ ಜನ ನಿರಾಸೆಯಾಗಿದ್ದಾರೆ. ಸತ್ಯಾಸತ್ಯತೆ ಬೇರೆ ರಾಜ್ಯಗಳಿಗೆ ಗೊತ್ತಾಗಿದೆ. ಇನ್ನು ಮುಂದೆ ರಾಜ್ಯದಲ್ಲಿ ಕಾಂಗ್ರೆಸ್ ಆಟ ನಡೆಯುವುದಿಲ್ಲ. ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಹೆಣಗುತ್ತಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮುಖ್ಯಮಂತ್ರಿ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ ಎಂದು ವ್ಯಂಗ್ಯವಾಡಿದರು.

ದೇಶದ ಪ್ರಧಾನಿ ನರೇಂದ್ರಮೋದಿರವರ ಪಾರದರ್ಶಕ ಆಡಳಿತ ಈ ಬಾರಿಯ ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ.ಗೆ ವರದಾನವಾಗಲಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಬಸವಪ್ರಭು ಮೇದಾರ ಕೇತೇಶ್ವರ ಸ್ವಾಮೀಜಿ ಹಾಗೂ ಅಪಾರ ಭಕ್ತರು ಹಾಜರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!