ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಬಂಧನ: ರೂ.4.95 ಲಕ್ಷ ಮೊತ್ತದ ಸೊತ್ತು ವಶ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಾದಕ ದ್ರವ್ಯವಾದ ಎಂಡಿಎಂಎ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಆರೋಪಿಗಳಿಂದ ರೂ.4.95 ಲಕ್ಷ ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬಂಟ್ವಾಳ ಕೊಲ್ನಾಡು ಬೊಲ್ಪಾದೆ ಹೌಸ್‌ನ ಅಬ್ದುಲ್ ರಹಿಮಾನ್(42) ಮತ್ತು ಇಳಂತಿಲ ಗ್ರಾಮದ ಜೋಗಿಬೆಟ್ಟಿನ ಮೊಹಮ್ಮದ್ ಜಿಯಾದ್(22) ಬಂಧಿತರು.

ಆರೋಪಿಗಳು ಮುಡಿಪು ಮೂಳೂರಿನಲ್ಲಿ ಶುಕ್ರವಾರ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ 1.75 ಲ.ರೂ. ಮೌಲ್ಯದ 35 ಗ್ರಾಂ ಎಂಡಿಎಂಎ, 2 ಮೊಬೈಲ್‌ಗಳು, ತೂಕಮಾಪನ, ಮಾರುತಿ ಆಲ್ಟೋ 800 ಕಾರು ಸೇರಿದಂತೆ ಒಟ್ಟು 4.95 ಲ.ರೂ.ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಎಂಡಿಎಂಎ ಡ್ರಗ್ಸ್‌ನ್ನು ಬೆಂಗಳೂರಿನಲ್ಲಿ ವಿದೇಶಿ ಪ್ರಜೆಯಿಂದ ಖರೀದಿಸಿ ಮಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿತರ ಪೈಕಿ ಅಬ್ದುಲ್ ರಹಿಮಾನ್‌ನ ಮೇಲೆ ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ವಿಗ್ರಹ ಕಳವು ಪ್ರಕರಣ, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಗಲಾಟೆ ಪ್ರಕರಣ, ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ಹಾಗೂ ಉಪ್ಪಿನಂಗಡಿ ಠಾಣೆಯಲ್ಲಿ ಎಂಡಿಎಂಎ ಮಾರಾಟ ಪ್ರಕರಣಗಳು ದಾಖಲಾಗಿದ್ದವು. ಮೊಹಮ್ಮದ್ ಜಿಯಾದ್ ಮೇಲೆ ಈ ಹಿಂದೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಎಂಡಿಎಂಎ ಸೇವನೆ ಮಾಡಿದ ಪ್ರಕರಣ ದಾಖಲಾಗಿತ್ತು. ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ಅವರ ಮಾರ್ಗದರ್ಶನದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ಸಿದ್ದಾರ್ಥ ಗೋಯಲ್ ಹಾಗೂ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ.ಹೆಗಡೆ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!