Monday, December 29, 2025

ಬೆಂಗಳೂರಿನಲ್ಲಿ ಡ್ರಗ್ಸ್ ಸೀಜ್: ಸರ್ಕಾರದ ವಿರುದ್ಧ JDS ಆಕ್ರೋಶ, ಗೃಹ ಸಚಿವರ ರಾಜೀನಾಮೆಗೆ ಆಗ್ರಹ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಡ್ರಗ್ಸ್ ಪತ್ತೆಹಚ್ಚಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ತೀವ್ರ ಟೀಕೆ ನಡೆಸಿದೆ. ಈ ಘಟನೆ ಕರ್ನಾಟಕದ ಪೊಲೀಸ್ ವ್ಯವಸ್ಥೆಯ ವೈಫಲ್ಯವನ್ನು ಬಹಿರಂಗಪಡಿಸಿದೆ ಎಂದು ಆರೋಪಿಸಿರುವ ಜೆಡಿಎಸ್, ಗೃಹ ಸಚಿವ ಜಿ.ಪರಮೇಶ್ವರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಜೆಡಿಎಸ್, ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದ ಗುಪ್ತಚರ ಇಲಾಖೆ ಮತ್ತು ಪೊಲೀಸ್ ವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ ಎಂದು ಟೀಕಿಸಿದೆ. ಸರ್ವಜನಾಂಗದ ಶಾಂತಿಯ ತೋಟವಾಗಿದ್ದ ಕರ್ನಾಟಕ ಇದೀಗ ಡ್ರಗ್ಸ್ ಕೇಂದ್ರವಾಗಿ ಪರಿವರ್ತನೆಯಾಗಿದೆ ಎಂದು ಪಕ್ಷ ಆರೋಪಿಸಿದೆ.

ರಾಜಧಾನಿ ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ತಯಾರಿಕಾ ಘಟಕಗಳನ್ನು ಮಹಾರಾಷ್ಟ್ರ ಪೊಲೀಸರು ಪತ್ತೆಹಚ್ಚಿರುವುದು ರಾಜ್ಯ ಪೊಲೀಸರ ಅಸಮರ್ಥತೆಯ ಸ್ಪಷ್ಟ ಸಾಕ್ಷಿಯಾಗಿದೆ. ಕಳೆದ ಜುಲೈನಲ್ಲಿ ಮುಂಬೈ ಪೊಲೀಸರು ಮೈಸೂರು ಜಿಲ್ಲೆಯಲ್ಲಿ ದಾಳಿ ನಡೆಸಿ ಸುಮಾರು 390 ಕೋಟಿ ರೂ. ಮೌಲ್ಯದ ಎಂಡಿಎಂಎ ಡ್ರಗ್ಸ್ ವಶಪಡಿಸಿಕೊಂಡಿದ್ದರು. ಇದೀಗ ಮತ್ತೆ ಮಹಾರಾಷ್ಟ್ರದ ಎಎನ್‌ಟಿಎಫ್ ತಂಡ ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿ 55 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ಸೀಜ್ ಮಾಡಿದೆ.

ಈ ಎಲ್ಲ ಬೆಳವಣಿಗೆಗಳು ಕಾಂಗ್ರೆಸ್ ಸರ್ಕಾರದ ದುರಾಡಳಿತವನ್ನು ತೋರಿಸುತ್ತವೆ ಎಂದು ಜೆಡಿಎಸ್ ಆರೋಪಿಸಿದ್ದು, ಅಸಮರ್ಥ ಗೃಹ ಸಚಿವರು ತಕ್ಷಣ ರಾಜೀನಾಮೆ ನೀಡಿ ಕರ್ನಾಟಕ ಪೊಲೀಸ್ ಇಲಾಖೆಯ ಗೌರವವನ್ನು ಉಳಿಸಬೇಕು ಎಂದು ಆಗ್ರಹಿಸಿದೆ.

error: Content is protected !!