ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೊಸ ವರ್ಷಾಚರಣೆ ವೇಳೆ ಬೆಂಗಳೂರು ಮಹಾನಗರದಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಪೊಲೀಸ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಮುಖ್ಯಮಂತ್ರಿಗಳು, ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ಪಡೆದರು. ಹೊಸ ವರ್ಷಾಚರಣೆ ಸಂದರ್ಭದಲ್ಲಿ ಮಹಿಳೆಯರ ಸುರಕ್ಷತೆಗೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ಹೊಸ ವರ್ಷಾಚರಣೆ ಬಳಿಕ ಜನರು ಸುಲಭವಾಗಿ ಜನರು ತಮ್ಮ ಮನೆಗಳಿಗೆ ಹಿಂತಿರುಗಲು ಅನುಕೂಲವಾಗುವಂತೆ ಮಧ್ಯರಾತ್ರಿ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಬಿಎಂಟಿಸಿ ಬಸ್‌ಗಳ ವ್ಯವಸ್ಥೆಯನ್ನು ಮಾಡಬೇಕು. ಮಹಾತ್ಮ ಗಾಂಧಿ ರಸ್ತೆ, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್, ಕೋರಮಂಗಲ, ಇಂದಿರಾನಗರ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಜನದಟ್ಟಣೆಯಾಗಿ ಯಾವುದೇ ಅನಾಹುತವಾಗದಂತೆ ಕ್ರಮ ವಹಿಸಬೇಕು. ಇದಕ್ಕಾಗಿ ಆಧುನಿಕ ತಂತ್ರಜ್ಞಾನದ ಸಮರ್ಪಕ ಬಳಕೆ ಮಾಡಬೇಕು ಎಂದು ಹೇಳಿದರು.

