ಹೊಸದಿಗಂತ ವರದಿ,ಬಳ್ಳಾರಿ:
ಬೆಳೆ ವಿಮೆ ಪರಿಹಾರಕ್ಕೆ ಸಂಬಂಧಪಟ್ಟಂತೆ, ಕೇಂದ್ರ ಕೃಷಿ ಸಚಿವರೊಂದಿಗೆ ಈಗಾಗಲೇ ಸಭೆ ನಡೆಸಿದ್ದು, ರೈತರಿಗೆ ಶೀಘ್ರದಲ್ಲಿ ಬರ ಪರಿಹಾರ ವಿತರಿಸಲು ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ಜಿಲ್ಲೆಯ ಸಂಡೂರು ತಾಲ್ಲೂಕಿನ ಕೋಡಾಲು ಹಾಗೂ ರಾಜಾಪುರ ಗ್ರಾಮಗಳ ವ್ಯಾಪ್ತಿಯ ರೈತರ ಹತ್ತಿ, ನವಣೆ ಮತ್ತು ಸಜ್ಜೆ ಜಮೀನುಗಳಿಗೆ ಮಂಗಳವಾರ ಸಂಜೆ ಭೇಟಿ ನೀಡಿ, ಮಳೆ ಇಲ್ಲದೆ ಅನಾವೃಷ್ಠಿಯಿಂದ ಹಾಳಾಗಿರುವ ಬೆಳೆ ಹಾನಿ ಪರಿಶೀಲಿಸಿ ಮಾತನಾಡಿದರು.
ಸಂಡೂರು ತಾಲ್ಲೂಕಿನ ಕೋಡಾಲು ಗ್ರಾಮ ವ್ಯಾಪ್ತಿಯ ರೈತ ಮಾರೆಪ್ಪನ ನವಣೆ, ಹತ್ತಿ ಬೆಳೆ ವೀಕ್ಷಣೆ ಮಾಡಿ, ಬೆಳೆ ಹಾನಿ ಕುರಿತು ಅಧಿಕಾರಿಗಳು ಹಾಗೂ ರೈತರಿಂದ ಮಾಹಿತಿ ಪಡೆದುಕೊಂಡರು.
ಫೂಟ್ಸ್ ಐಡಿಯಲ್ಲಿ ರೈತರು ತಮ್ಮ ಹೆಸರಿನಲ್ಲಿರುವ ಎಲ್ಲ ಜಮೀನನ್ನು ನೋಂದಣಿ ಮಾಡಿಸಬೇಕು. ಇದರಿಂದ ಬರ ಪರಿಹಾರಕ್ಕೆ ಅನುಕೂಲವಾಗಲಿದೆ ಎಂದು ರೈತರಿಗೆ ಮನವಿ ಮಾಡಿದರು.
ಈಗಾಗಲೇ ರಾಜ್ಯದ ಬರ ಪರಿಸ್ಥಿತಿಯ ಕುರಿತು, ಕಂದಾಯ ಸಚಿವ ಕೃಷ್ಣ ಭೈರೇಗೌಡ ಹಾಗೂ ತಾವು ದೆಹಲಿಗೆ ತೆರಳಿ, ಕೇಂದ್ರದ ಕೃಷಿ ಸಚಿವರ ಜೊತೆ ಸಭೆ ನಡೆಸಿ, ಕೇಂದ್ರ ಸರ್ಕಾರಕ್ಕೆ ಇಲ್ಲಿನ ಬರ ಪರಿಸ್ಥಿತಿಯ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಈ ತಿಂಗಳ ಅಂತ್ಯದಲ್ಲಿ ಕೇಂದ್ರ ಸರ್ಕಾರವು ಬರ ಪರಿಹಾರದ ಹಣ ಬಿಡುಗಡೆ ಮಾಡಲಿದೆ ಎಂಬ ನಿರೀಕ್ಷೆ ಇದೆ ಎಂದು ತಿಳಿಸಿದರು.
ಕೇಂದ್ರದಿಂದ ಬರ ಪರಿಹಾರ ಬಂದ ತಕ್ಷಣ, ಸಣ್ಣ ಮತ್ತು ಅತಿ ಸಣ್ಣ ರೈತರ ಭೂಮಿಯನ್ನು ಇಂತಿಷ್ಟು ಹಾನಿ ಎಂದು ಪರಿಗಣಿಸಿ, ಫ್ರೂಟ್ಸ್ ತತ್ರಾಂಶದ ಮೂಲಕ ನೇರವಾಗಿ ರೈತರಿಗೆ ಬರ ಪರಿಹಾರವನ್ನು ನೀಡಲಾಗುತ್ತದೆ ಎಂದು ವಿವರಿಸಿದರು.
ಈ ಸಂದರ್ಭದಲ್ಲಿ ಸಂಡೂರು ಶಾಸಕ ಈ.ತುಕಾರಾಂ, ಜಿ.ಪಂ.ಸಿಇಓ ರಾಹುಲ್ ಶರಣಪ್ಪ ಸಂಕನೂರ, ಕೃಷಿ ಜಂಟಿ ನಿರ್ದೇಶಕ ಕೆ.ಮಲ್ಲಿಕಾರ್ಜುನ, ಉಪ ನಿರ್ದೇಶಕ ಕೆಂಗೆಗೌಡ, ತೋಟಗಾರಿಕೆ ಉಪನಿರ್ದೇಶಕ ಸಂತೋಷ್ ಸಪ್ಪಂಡಿ, ತಹಶೀಲ್ದಾರ ಪವನ್ ಕುಮಾರ್, ತಾಲ್ಲೂಕು ಕೃಷಿ ಸಹಾಯಕ ನಿರ್ದೇಶಕ ಮಂಜುನಾಥ, ತೋಟಗಾರಿಕೆ ಸಹಾಯಕ ನಿರ್ದೇಶಕ ಹನುಮಂತಪ್ಪ ನಾಯ್ಕ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇತರರು ಉಪಸ್ಥಿತರಿದ್ದರು.