ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಗುರು ರಾಘವೇಂದ್ರ ಸಹಕಾರ ಬ್ಯಾಂಕ್‍ನ ಅಕ್ರಮದ ತನಿಖೆಯನ್ನು ಸಿಬಿಐಗೆ ವಹಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಠೇವಣಿ ಹಣ ಸೇರಿದಂತೆ ಬ್ಯಾಂಕ್ ಸಂಬಂಧಿಸಿ ಹಣವನ್ನು ದುರುಪಯೋಗ ಪಡಿಸಿಕೊಂಡ ಆರೋಪ ಕೇಳಿಬಂದಿದ್ದು, ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಯು.ಬಿ. ವೆಂಕಟೇಶ್ ಒತ್ತಾಯಿಸಿದ್ದರು. ಅದರಂತೆ ಇದೀಗ ರಾಜ್ಯ ಸರ್ಕಾರ ಶನಿವಾರ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಅಧಿಕೃತ ಆದೇಶಿಸಿದೆ.
ಪ್ರಕರಣದ ಹಿನ್ನೆಲೆ
ಚಾಲ್ತಿಯಲ್ಲಿರುವ ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ಬಡ್ಡಿಯ ಆಮಿಷವೊಡ್ಡಿ ಜನರಿಂದ ಠೇವಣಿ ಪಡೆದು ವಂಚಿಸಿದ ಆರೋಪ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ನಿಯಮಿತದ ಮೇಲಿದೆ. ಹೆಚ್ಚಿನ ಬಡ್ಡಿ ಆಸೆಗೆ ಸಾವಿರಾರು ಗ್ರಾಹಕರು ಈ ಸಂಸ್ಥೆಯಲ್ಲಿ ನೂರಾರು ಕೋಟಿ ರೂ. ಠೇವಣಿ ಇಟ್ಟಿದ್ದರು. ಸಾಲಗಾರರು, ಸಂಸ್ಥೆಯ ಆಡಳಿತ ಮಂಡಳಿ ಮತ್ತು ಉದ್ಯೋಗಿಗಳೊಂದಿಗೆ ಶಾಮೀಲಾಗಿ ನಕಲಿ ಠೇವಣಿ ಹಾಗೂ ನಿಶ್ಚಿತ ಠೇವಣಿಗಳ ಆಧಾರದಲ್ಲಿ ಭಾರಿ ಮೊತ್ತದ ಸಾಲ ಪಡೆದು ಮರು ಪಾವತಿಸದೆ ವಂಚಿಸಿದ್ದರು.
ಸಂಸ್ಥೆಯಿಂದ ವಂಚನೆಗೆ ಒಳಗಾದವರಲ್ಲಿ ಹಿರಿಯ ನಾಗರಿಕರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹಿರಿಯ ನಾಗರಿಕರು ತಮ್ಮ ಉಳಿತಾಯ ಹಾಗೂ ನಿವೃತ್ತಿ ವೇತನದ ಹಣವನ್ನು ವೃದ್ಧಾಪ್ಯದಲ್ಲಿ ಆರ್ಥಿಕ ಭದ್ರತೆಗಾಗಿ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ನಿಯಮಿತದಲ್ಲಿ ಠೇವಣಿ ಇಟ್ಟಿದ್ದರು. ಆದರೆ, ಸಂಸ್ಥೆಯ ಆಡಳಿತ ಮಂಡಳಿಯು ಸಾಲಗಾರರಿಂದ ಸೂಕ್ತ ಶ್ಯೂರಿಟಿ ಪಡೆಯದೆ ಸಾಲ ನೀಡಿತ್ತು. ಜತೆಗೆ ನಕಲಿ ಖಾತೆಗಳನ್ನು ಸೃಷ್ಟಿಸಿ ಸಾಲ ಮಂಜೂರು ಮಾಡಿತ್ತು.
ಈ ಪ್ರಕರಣದಲ್ಲಿ ಸಂಸ್ಥೆಯ ಅಧ್ಯಕ್ಷ ಸೇರಿದಂತೆ 4 ಮಂದಿಯನ್ನು ಬಂಧಿಸಿದ್ದರು. ಅದಕ್ಕೂ ಮೊದಲು ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಬಡ್ಡಿ ಠೇವಣಿದಾರರ ರಕ್ಷಣೆ ಕಾಯಿದೆ-2004 ಮತ್ತು ಐಪಿಸಿಯ ವಿವಿಧ ಸೆಕ್ಷನ್‌ಗಳಡಿ ಸಂಸ್ಥೆ ಹಾಗೂ ಇತರರ ವಿರುದ್ಧ ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದರು. ಬಳಿಕ ಇ.ಡಿ. ಅಧಿಕಾರಿಗಳು 2020ರಲ್ಲಿ ಪಿಎಂಎಲ್‌ಎ ಅಡಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದರು.
ಭರವಸೆ ನೀಡಿದ್ದ ಸಹಕಾರಿ ಸಚಿವ
ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಸದಸ್ಯ ಯು.ಬಿ. ವೆಂಕಟೇಶ್ ಅವರು ಕೇಳಿದ್ದ ಗಮನಸೆಳೆಯುವ ಸೂಚನೆಗೆ ಉತ್ತರಿಸಿದ್ದ ಸಹಕಾರಿ ಸಚಿವ ಕೆಎನ್ ರಾಜಣ್ಣ, ”ಈ ಪ್ರಕರಣವನ್ನು ಸಿಬಿಐಗೆ ನೀಡಲು ನಿರ್ಧಾರ ಮಾಡಲಾಗಿದೆ. ಆದರೆ, ಕನ್ನಡದಲ್ಲಿರುವ ವಿಷಯಗಳು ಆಂಗ್ಲ ಭಾಷೆಗೆ ಅನುವಾದ ಮಾಡಬೇಕಿರುವುದರಿಂದ ವಿಳಂಬವಾಗಿದೆ. 500 ಪುಟಗಳ ವರದಿಯನ್ನು ಆಂಗ್ಲ ಭಾಷೆಗೆ ಅನುವಾದ ಮಾಡಲಾಗುತ್ತಿದೆ. ಈ ತಿಂಗಳ ಅಂತ್ಯದಲ್ಲಿ ಅನುವಾದ ಕಾರ್ಯ ಮುಗಿಸಿ ಸಿಬಿಐಗೆ ವಹಿಸಲಾಗುವುದು. ಈ ಬ್ಯಾಂಕನ್ನು ಏಕೆ ಮುಚ್ಚಬಾರದು ಎಂದು ಆರ್‌ಬಿಐ ಕೇಳಿದ್ದು, ಇದನ್ನು ಮುಚ್ಚಲು ನಮಗೂ ಇಷ್ಟವಿಲ್ಲ. ಆರ್‌ಬಿಐ ಜತೆಗೆ ಪತ್ರ ವ್ಯವಹಾರ ಮಾಡಲಾಗುವುದು ಎಂದು ಹೇಳಿದ್ದರು.
ಬ್ಯಾಂಕ್‌ಗೆ ಸೇರಿದ 114.19 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ
ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ನಿಯಮಿತದ ಅವ್ಯವಹಾರ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯದ (ಇ.ಡಿ.) ಅಧಿಕಾರಿಗಳು ಸಂಸ್ಥೆಯ 114.19 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಂಡಿತ್ತು.