ಹೊಸದಿಗಂತ ಡಿಜಿಟಲ್ ಡೆಸ್ಕ್:
ನಗರದ ಸಂಚಾರ ದಟ್ಟಣೆ ನಿವಾರಣೆ ಹಾಗೂ ಸುಗಮ ಸಂಚಾರಕ್ಕೆ ಹಾದಿ ಸುಗಮಗೊಳಿಸುವ ನಿಟ್ಟಿನಲ್ಲಿ ನಗರಸಭೆ ಬಿಗಿ ಕ್ರಮ ಕೈಗೊಂಡಿದೆ. ಚಳ್ಳಕೆರೆ ಗೇಟ್ ಬಳಿಯ ರಸ್ತೆ ಬದಿಗಳಲ್ಲಿ ಅನಧಿಕೃತವಾಗಿ ತಲೆ ಎತ್ತಿದ್ದ ಗೂಡಂಗಡಿಗಳನ್ನು ಸೋಮವಾರ ಸಂಜೆಯಿಂದ ಜೆಸಿಬಿ ಮೂಲಕ ತೆರವುಗೊಳಿಸಲಾಗುತ್ತಿದೆ.
ನಗರಸಭೆ ಆಯುಕ್ತೆ ಲಕ್ಷ್ಮೀ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಯುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ಈ ಹಿಂದೆ ಹಲವು ಬಾರಿ ನೋಟಿಸ್ ನೀಡಿದ್ದರೂ ತೆರವುಗೊಳಿಸದ ಹಿನ್ನೆಲೆಯಲ್ಲಿ, ನ್ಯಾಯಾಲಯದ ಆದೇಶದಂತೆ ಅಧಿಕಾರಿಗಳು ಈ ಕಠಿಣ ನಿರ್ಧಾರ ತೆಗೆದುಕೊಂಡಿದ್ದಾರೆ. ಹಣ್ಣು, ತರಕಾರಿ, ಟೀ ಅಂಗಡಿ ಸೇರಿದಂತೆ ಹಲವು ವ್ಯಾಪಾರ ಮಳಿಗೆಗಳನ್ನು ತೆರವುಗೊಳಿಸಲಾಗಿದ್ದು, ವ್ಯಾಪಾರಿಗಳು ಈ ಕ್ರಮಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

