ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಸ್ತುತ ಕಾಣಿಸಿಕೊಂಡಿರುವ ಕೋವಿಡ್ ಉಪತಳಿ ಅಪಾಯಕಾರಿ ಆಗಿರಲ್ಲ. ಯಾರಿಗೂ ಹೆಚ್ಚು ಅಪಾಯ ಇಲ್ಲ ಎಂಬುದನ್ನು ಈಗಾಗಲೇ ತಜ್ಞರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕ್ರಿಸ್‌ಮಸ್, ಹೊಸ ವರ್ಷಾಚರಣೆ ಸೇರಿದಂತೆ ಯಾವುದೇ ರೀತಿಯ ಕಾರ್ಯಕ್ರಮಗಳಿಗೆ ಪ್ರತ್ಯೇಕ ನಿರ್ಬಂಧ ಅಥವಾ ಹೊಸ ಮಾರ್ಗಸೂಚಿ ಇಲ್ಲ. ಎಲ್ಲವೂ ಸಹಜ ಸ್ಥಿತಿಯಲ್ಲಿದೆ. ಕ್ಯಾಬಿನೆಟ್ ಉಪಸಮಿತಿ ಮುಂದಿನ ಸೋಮವಾರ ಅಥವಾ ಮಂಗಳವಾರ ಸಭೆ ನಡೆಸಲಿದೆ. ಕೇಂದ್ರ ಮತ್ತು ಬೇರೆ ರಾಜ್ಯಗಳ ಮಾಹಿತಿ ಪಡೆದು ಮುಂದಿನ ಅಗತ್ಯ ನಿರ್ಧಾರಗಳನ್ನು ಕೈಗೊಳ್ಳಲಾಗುವುದು ಎಂದು ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಆರೋಗ್ಯ ಇಲಾಖೆ ಸೇರಿದಂತೆ ಹಿರಿಯ ಅಧಿಕಾರಿಗಳ ಸಭೆ ನಡೆಸಿ, ಕೋವಿಡ್ ಹಿನ್ನೆಲೆಯಲ್ಲಿ ಕೈಗೊಳ್ಳಲಾದ ಕ್ರಮಗಳ ಬಗ್ಗೆ ಮಾಹಿತಿ ಪಡೆದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.
ತಾಂತ್ರಿಕ ಸಮಿತಿ ಸೂಚಿಸಿದರೆ ಮಾತ್ರ ವ್ಯಾಕ್ಸಿನೇಶನ್ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಆದರೆ ಯಾವುದೇ ಸಂದರ್ಭ ಎದುರಿಸಲು ಸಿದ್ಧವಿರುವುದಾಗಿ ಈಗಾಗಲೇ ಮುಖ್ಯಮಂತ್ರಿ ಹೇಳಿದ್ದಾರೆ. ಅಗತ್ಯ ಮುಂಜಾಗೃತಾ ಹಾಗೂ ಎಚ್ಚರಿಕಾ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ರಾಜ್ಯದಲ್ಲಿ ಸದ್ಯ ಐದು ಸಾವಿರ ಟೆಸ್ಟಿಂಗ್ ಟಾರ್ಗೆಟ್ ನೀಡಲಾಗಿದೆ. ಕೇರಳ ಗಡಿ ಜಿಲ್ಲೆಯಾದ ದಕ್ಷಿಣ ಕನ್ನಡ, ಮೈಸೂರಿಗೆ ತಲಾ ೩೦೦ ಟೆಸ್ಟ್ ಉಳಿದಂತೆ ಬೆಂಗಳೂರು ಹೊರತುಪಡಿಸಿ ಇತರ ಜಿಲ್ಲೆಗಳಲ್ಲಿ ತಲಾ ೧೦೦ ಅಥವಾ ೧೫೦ ಟೆಸ್ಟ್‌ಗಳ ಗುರಿ ನೀಡಲಾಗಿದೆ. ಜನಸಂದಣಿ ಇರುವ ಪ್ರದೇಶಗಳಲ್ಲಿ ಮಾಸ್ಕ್ ಧರಿಸಿದರೆ ಉತ್ತಮ. ಆದರೆ ಯಾವುದೂ ಕಡ್ಡಾಯ ಮಾಡಲಾಗಿಲ್ಲ. ಈ ಉಪತಳಿ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ಪ್ರಕಾರ ಇದು ತೀವ್ರತೆರನಾದದ್ದು ಅಲ್ಲ ಎಂದು ಹೇಳಲಾಗಿದೆ. ಹಾಗಾಗಿ ಯಾವುದನ್ನೂ ಎಲ್ಲೂ ಕಡ್ಡಾಯ ಅಂತ ಮಾಡುತ್ತಿಲ್ಲ. ಆದರೆ ಮುಂದೆ ಯಾವುದೇ ರೀತಿಯ ತೊಂದರೆ ಆಗದಂತೆ ಪೂರ್ವ ಸಿದ್ಧತೆ ನಡೆಸಲಾಗುತ್ತಿದೆ. ಇದರಿಂದ ನಮ್ಮ ಆರೋಗ್ಯ ವ್ಯವಸ್ಥೆಗೂ ಅನುಕೂಲ ಎಂದು ಸಚಿವರು ಹೇಳಿದರು.
ರಾಜ್ಯದಲ್ಲಿ ಸದ್ಯ ಕೋವಿಡ್‌ನ ಉಪತಳಿ ಜೆಎನ್.೧ ಪ್ರಕರಣ ದೃಢಪಟ್ಟಿಲ್ಲ. ಕೋವಿಡ್ ಸಂಬಂಧಿಸಿ ಪರೀಕ್ಷೆಗಾಗಿ ಕಳುಹಿಸಿದ ನಾಲ್ಕೈದು ದಿನಗಳಲ್ಲಿ ವರದಿ ಬರಲಿದೆ ಎಂದು ಸಚಿವರು ಹೇಳಿದರು.
ವೆಂಟಿಲೇಟರ್ ಕಾರ್ಯನಿರ್ವಹಣೆ, ಸರಕಾರಿ ಆಸ್ಪತ್ರೆಗಳಿಗೆ ಪಿಪಿಇ ಕಿಟ್ ಪೂರೈಕೆ ಆಗುತ್ತಿದೆ. ಕೆಲವು ಕಡೆ ಸ್ವಲ್ಪ ತಡವಾಗಿದ್ದರೂ ಶೀಘ್ರವೇ ಎಲ್ಲಾ ಕಡೆ ಪೂರೈಕೆಯಾಗಲಿದೆ. ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಹಾಗೂ ಮಾರ್ಗಸೂಚಿಗಳ ಬಗ್ಗೆಯೂ ಸಂಪುಟ ಉಪಸಮಿತಿ ಸಭೆ ನಿರ್ಧರಿಸಲಿದೆ ಎಂದರು.
ಆರೋಗ್ಯ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸಲಹೆ ನೀಡಿದ ಸಚಿವರು, ಸಾವು ಸಂಭವಿಸಿದ ಸಂದರ್ಭ ಕೋವಿಡ್ ದೃಢೀಕರಣವನ್ನು ನಿಖರವಾಗಿ ಮಾಡಬೇಕು. ಜಿಲ್ಲಾ ಸಮಿತಿ ಮೂಲಕ ಪರಿಶೀಲನೆ ನಡೆಸಿ ಕೋವಿಡ್ ಸಾವಿನ ಬಗ್ಗೆ ಘೋಷಣೆ ಮಾಡಬೇಕು. ಖಾಸಗಿ ಆಸ್ಪತ್ರೆಗಳ ಆಡಳಿತ ವರ್ಗಕ್ಕೂ ಅಗತ್ಯ ಕ್ರಮಗಳ ಬಗ್ಗೆ ಸೂಚನೆ ನೀಡುವಂತೆ ಅಧಿಕಾರಿಗಳಿಗೆ ಸಚಿವರು ನಿರ್ದೇಶಿಸಿದರು.
ವೈದ್ಯಕೀಯ ಕಾಲೇಜುಗಳು, ಪ್ಯಾರಾ ಮೆಡಿಕಲ್ ಕಾಲೇಜುಗಳು ಮತ್ತು ಇತರ ಕಾಲೇಜುಗಳಲ್ಲಿ ಕೇರಳ ಮತ್ತು ಇತರ ವಿದ್ಯಾರ್ಥಿಗಳಲ್ಲಿ ಕೋವಿಡ್ ಲಕ್ಷಣಗಳು ಕಂಡು ಬಂದಾಗ ತಪಾಸಣೆಗೆ ಒಳಪಡಿಸುವಂತೆ ಸಚಿವರು ಸಲಹೆ ನೀಡಿದರು.
ಜಿಲ್ಲಾಕಾರಿ ಮುಲ್ಲೈ ಮುಗಿಲನ್, ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ರಿಷ್ಯಂತ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಪಾಲಿಕೆ ಆಯುಕ್ತ ಆನಂದ್, ಜಿಲ್ಲಾ ಆರೋಗ್ಯಾಧಿಕಾರಿ, ಡಾ. ತಿಮ್ಮಯ್ಯ, ಅಧಿಕಾರಿಗಳು ಉಪಸ್ಥಿತರಿದ್ದರು.