ಹೊಸ ದಿಗಂತ ಡಿಜಿಟಲ್ ಡೆಸ್ಕ್
ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮಾಡುವ ಆರೋಪ, ಟೀಕೆಗಳಿಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಈ ಬಗ್ಗೆ ಪಕ್ಷದ ವರಿಷ್ಠರಿಗೂ ದೂರು ನೀಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ನಗರದ ಜಿಎಂಐಟಿ ಅತಿಥಿಗೃಹದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವನಗೌಡ ಪಾಟೀಲ್ ಯತ್ನಾಳ್ ಬಗ್ಗೆ ನಾನು ಏನನ್ನೂ ಮಾತನಾಡುವುದಿಲ್ಲ. ಮುಂದಿನ ದಿನಗಳಲ್ಲಿ ಎಲ್ಲವೂ ಸರಿ ಹೋಗಲಿದೆ ಎಂದರು.
ಜಾತಿ ಗಣತಿ ಕುರಿತಂತೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ವೈಜ್ಞಾನಿಕವಾಗಿ ಜಾತಿ ಗಣತಿ ಆಗಬೇಕೆಂಬ ಅಭಿಪ್ರಾಯವೂ ಕೇಳಿ ಬರುತ್ತಿದೆ. ನಮ್ಮ ನಿಲುವು ಸಹ ಇದೇ ಆಗಿದೆ. ಜನರ ವಿರೋಧದ ಮಧ್ಯೆಯೂ ಸರ್ಕಾರ ಯಾವುದೇ ಕಾರಣಕ್ಕೂ ಜಾತಿ ಗಣತಿ ವರದಿ ಅಂಗೀಕರಿಸಬಾರದು ಎಂದು ಅವರು ಸಲಹೆ ನೀಡಿದರು.
ಬಿಜೆಪಿ ರಾಜ್ಯ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ನೇಮಿಸಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ. ಅಳೆದು, ತೂಗಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದೆ. ಹೊಸ ಪದಾಧಿಕಾರಿಗಳ ಆಯ್ಕೆಯ ವಿಚಾರದಲ್ಲಿ ಯಾವುದೇ ಗೊಂದಲಗಳೂ ಇಲ್ಲ. ಪಾರದರ್ಶಕವಾಗಿ ಆಯ್ಕೆಯಾಗಿದ್ದು, ಅಸಮಾಧಾನದ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಅವರು ತಿಳಿಸಿದರು.