ಹೊಸ ದಿಗಂತ ವರದಿ, ಚಿತ್ರದುರ್ಗ:
ಕಳೆದ ಬಾರಿ ಕೋವಿಡ್-19ರ ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ಎದುರಾದ ಲೋಪದೋಷಗಳು, ವೈಫಲ್ಯಗಳನ್ನು ಗಮನದಲ್ಲಿರಿಸಿಕೊಂಡು, ಈ ಬಾರಿ ಅದು ಮರುಕಳಿಸದಂತೆ ಮುಂಜಾಗ್ರತೆ ವಹಿಸಿ ಅಗತ್ಯ ಸಿದ್ಧತೆಗಳೊಂದಿಗೆ ಕಾರ್ಯನಿರ್ವಹಿಸುವಂತೆ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಜಿಲ್ಲೆಯಲ್ಲಿ ಕೋವಿಡ್-19ರ ಸಂಬಂಧ ಸಿದ್ದತೆ ಮತ್ತು ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೋವಿಡ್-19 ಸಾಂಕ್ರಾಮಿಕ ರೋಗ ಹರಡುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಈಗಾಗಲೇ14 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದ್ದು, ಯಾರೂ ಸಹ ಭಯ, ಆತಂಕ ಪಡುವ ಅಗತ್ಯವಿಲ್ಲ. ಕಳೆದ ಬಾರಿ ಆದಂತಹ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ವಿಶೇಷ ಕಾಳಜಿ ವಹಿಸಿ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಕಲ ಸಿದ್ಧತೆ ಕೈಗೊಳ್ಳಬೇಕು ಎಂದರು.
ಕೋವಿಡ್ ಸಾಂಕ್ರಾಮಿಕದ ಯಾವುದೇ ಪರಿಸ್ಥಿತಿಯನ್ನು ನಿಭಾಯಿಸಲು ಅಧಿಕಾರಿಗಳು ಅಗತ್ಯವಿರುವ ಎಲ್ಲ ಕ್ರಮಗಳನ್ನು, ತಯಾರಿಗಳನ್ನು ಮಾಡಿಟ್ಟುಕೊಳ್ಳಬೇಕು. ಕಳೆದ ಬಾರಿಯ ಕೋವಿಡ್ ಅಲೆ ಸಂದರ್ಭದಲ್ಲಿ ಬಹಳಷ್ಟು ಜನ ಸಾವು ನೋವು ಅನುಭವಿಸಿದರು. ಬಡವರು ಚಿಕಿತ್ಸೆಗಾಗಿ ಆಸ್ಪತ್ರೆಗಳಲ್ಲಿ ಬೆಡ್ ದೊರೆಯದೆ ಅಲೆದಾಡುವ ಪರಿಸ್ಥಿತಿ ಎದುರಿಸಿದರು. ಹೀಗಾಗಿ ಸರ್ಕಾರಿ ಆಸ್ಪತ್ರೆಗಳನ್ನು ಇನ್ನಷ್ಟು ಬಲಪಡಿಸಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿಯೇ ಸೂಕ್ತ ಚಿಕಿತ್ಸೆ ದೊರೆಯುವಂತಾಗಬೇಕು, ಇದಕ್ಕಾಗಿ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಹಾಸ್ಟೆಲ್ ಗಳಿಗೆ ಭೇಟಿ ನೀಡಿ ನಿಯಮಿತವಾಗಿ ವಿದ್ಯಾರ್ಥಿಗಳ ಆರೋಗ್ಯ ಪರೀಕ್ಷಿಸಬೇಕು. ಈ ಕುರಿತು ತಾಲ್ಲೂಕು ಆರೋಗ್ಯಾಧಿಕಾರಿಗಳು ಹೆಚ್ಚಿನ ಕಾಳಜಿ ವಹಿಸಬೇಕು. ಹಾಸ್ಟೆಲ್ ಗಳಲ್ಲಿ ಸೋಪು ಸೇರಿದಂತೆ ಇತ್ಯಾದಿ ಪರಿಕರಗಳನ್ನು ಸಮರ್ಪಕವಾಗಿ ವಿತರಣೆಯಾಗುತ್ತಿಲ್ಲ ಎಂಬ ದೂರುಗಳಿವೆ ಈ ಕುರಿತು ಅಗತ್ಯ ಕ್ರಮ ವಹಿಸಬೇಕು ಎಂದು ಸಚಿವರು ತಿಳಿಸಿದರು.
ಹೊಸ ವರ್ಷಾಚರಣೆ ಸಂದರ್ಭದಲ್ಲಿ ವಿ.ವಿ.ಸಾಗರ ಜಲಾಶಯ, ಜೋಗಿಮಟ್ಟಿ, ಚಿತ್ರದುರ್ಗ ಕೋಟೆ, ನಾಯಕನಹಟ್ಟಿ ಸೇರಿದಂತೆ ವಿವಿಧ ಪ್ರವಾಸಿ ತಾಣಗಳಿಗೆ ಹೆಚ್ಚಿನ ಜನಸಂದಣಿಯಾಗುವ ಸಾಧ್ಯತೆಗಳಿವೆ, ಹೀಗಾಗಿ ಪ್ರವಾಸಿ ತಾಣಗಳ ಬಗ್ಗೆ ನಿಗಾ ಇರಿಸುವುದು ಸೂಕ್ತ. ಕೇರಳ ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ವರದಿಯಾಗುತ್ತಿರುವುದರಿಂದ, ಶಬರಿಮಲೆಗೆ ಹೋಗಿಬಂದವರ ಬಗ್ಗೆ ನಿಗಾ ವಹಿಸಬೇಕು. ಕೋವಿಡ್ ಸೋಂಕು ದೃಢಪಟ್ಟವರನ್ನು ಮಾತ್ರವಲ್ಲದೆ, ಪ್ರಾಥಮಿಕ ಸಂಪರ್ಕಿತರ ಪರೀಕ್ಷೆಯನ್ನೂ ಮಾಡಬೇಕು ಎಂದು ಸಚಿವರು ಸೂಚನೆ ನೀಡಿದರು.
ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಮಾತನಾಡಿ, ಕೋವಿಡ್ ಚಿಕಿತ್ಸೆಗೆ ಸಂಬಂಧಪಟ್ಟಂತೆ ಎಲ್ಲಾ ಸೌಲಭ್ಯಗಳನ್ನು ಸಮರ್ಪಕಗೊಳಿಸಲಾಗುತ್ತಿದೆ. ಜಿಲ್ಲಾ ಆಸ್ಪತ್ರೆಯಲ್ಲಿ 450 ಹಾಸಿಗೆ ಸಾಮರ್ಥ್ಯ ಹೊಂದಿದ್ದು, ಇದರ ಜೊತೆಗೆ ಹೊಸ ಕಟ್ಟಡದಲ್ಲಿ 150 ಹಾಸಿಗೆಗಳಿದ್ದು, ಒಟ್ಟಾರೆ 600 ಬೆಡ್ಗಳು ಲಭ್ಯವಿದೆ. 60 ವರ್ಷ ಮೇಲ್ಪಟ್ಟವರು ಹಾಗೂ ದೀರ್ಘಕಾಲೀನ ಅನಾರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿರುವವರು ಮುಂಜಾಗ್ರತಾ ಕ್ರಮವಾಗಿ ಜನನಿಬಿಡ ಪ್ರದೇಶಗಳಿಗೆ ತೆರಳದಂತೆ ಹಾಗೂ ಮಾಸ್ಕ್ ಧರಿಸುವಂತೆ ಅರಿವು ಮೂಡಿಸಲಾಗುತ್ತಿದೆ ಎಂದರು.
ಕೋವಿಡ್ ಪರೀಕ್ಷೆ ಸಂಬಂಧ ಸಾಕಷ್ಟು ಪ್ರಮಾಣದಲ್ಲಿ ಟೆಸ್ಟಿಂಗ್ ಕಿಟ್ಗಳು ಲಭ್ಯವಿದ್ದು, ಈಗಾಗಲೇ ೮೦೦ ಕಿಟ್ಗಳು ಬಂದಿವೆ. ೧೫ ದಿನಗಳಿಗೆ ಆಗುವಷ್ಟು ಟೆಸ್ಟಿಂಗ್ ಕಿಟ್ಗಳು ಇವೆ. ನಿಗದಿಪಡಿಸಿರುವ ಗುರಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಟೆಸ್ಟ್ ಮಾಡಲಾಗುತ್ತಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಚಂದ್ರಶೇಖರ್ ಕಂಬಾಳಿಮಠ್ ಸಭೆಗೆ ಮಾಹಿತಿ ನೀಡಿದರು.
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಮಾತನಾಡಿದರು.
ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, ಜಿಲ್ಲೆಯಲ್ಲಿ ದೃಢಪಟ್ಟಿರುವ 14 ಕೋವಿಡ್ ಪ್ರಕರಣದಲ್ಲಿ ಯಾರಲ್ಲೂ ಜೆ.ಎನ್-01 ಸೋಂಕು ದೃಢಪಟ್ಟಿಲ್ಲ, ಆದರೆ, ಕೋವಿಡ್ ದೃಢಪಟ್ಟಿರುವವರ ಸಂಗ್ರಹಿತ ಮಾದರಿಯನ್ನು ಈಗಾಗಲೆ ಜಿನೋಮ್ ಸೀಕ್ವೆನ್ಸ್ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಇನ್ನೂ ವರದಿ ಬಂದಿಲ್ಲ ಎಂದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂಧರ್ ಕುಮಾರ್ ಮೀನಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಚಂದ್ರಶೇಖರ್ ಕಂಬಾಳಿಮಠ್, ತಾಲ್ಲೂಕು ವೈದ್ಯಾಧಿಕಾರಿ ಡಾ. ಗಿರೀಶ್, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ತಾಲ್ಲೂಕುಗಳ ವೈದ್ಯಾಧಿಕಾರಿಗಳು ಹಾಜರಿದ್ದರು.