Thursday, January 1, 2026

ನಿಟ್ಟೆ ಶಿಕ್ಷಣ ಸಮೂಹ ಸಂಸ್ಥೆ ಅಧ್ಯಕ್ಷ, ಶೈಕ್ಷಣಿಕ-ಕೈಗಾರಿಕಾ ಕ್ರಾಂತಿಯ ನಾಯಕ ವಿನಯ ಹೆಗ್ಡೆ ವಿಧಿವಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಎನ್. ವಿನಯ ಹೆಗ್ಡೆ (86) ಇಂದು ಬೆಳಗಿನ ಜಾವ 2 ಗಂಟೆ ಸುಮಾರಿಗೆ ಮಂಗಳೂರು ಕದ್ರಿಯ ಶಿವಭಾಗ್ ನ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಶಿಕ್ಷಣ ತಜ್ಞ, ಉದ್ಯಮಿ ಮತ್ತು ಸಮಾಜ ಸೇವಕರಾಗಿದ್ದ ಅವರು, ನಿಟ್ಟೆ ಶಿಕ್ಷಣ ಸಂಸ್ಥೆಗಳ ವಿಸ್ತರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ರಾಜ್ಯೋತ್ಸವ ಪ್ರಶಸ್ತಿ ಮತ್ತು ಗೌರವ ಡಾಕ್ಟರೇಟ್ ಸೇರಿದಂತೆ ಹಲವು ಗೌರವಗಳಿಗೆ ಅವರು ಪಾತ್ರರಾಗಿದ್ದರು.

ರಾಜ್ಯದ ಪ್ರಮುಖ ಶಿಕ್ಷಣ ತಜ್ಞರಾಗಿ ಉದ್ಯಮಿಯಾಗಿ ಮತ್ತು ಸಮಾಜ ಸೇವಕರಾಗಿ ಅವರು ಗುರುತಿಸಿಕೊಂಡಿದ್ದಾರೆ.

ಲೋಕಸಭಾ ಸ್ಪೀಕರ್ ಆಗಿದ್ದ ದಿವಂಗತ ಜಸ್ಟಿಸ್ ಕೆ.ಎಸ್. ಹೆಗ್ಡೆ ಅವರ ಪುತ್ರರಾಗಿದ್ದ ಅವರು ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ಶಿಕ್ಷಣ ಪೂರೈಸಿ ತಮ್ಮ ತಂದೆಯವರ ಆಶಯದಂತೆ 1979ರಲ್ಲಿ ‘ನಿಟ್ಟೆ ಎಜುಕೇಶನ್ ಟ್ರಸ್ಟ್’ ಸ್ಥಾಪಿಸಿದ್ದರು.‌ ಇಂದು ನಿಟ್ಟೆ ಶಿಕ್ಷಣ ಸಂಸ್ಥೆಗಳು ಮಂಗಳೂರು, ಬೆಂಗಳೂರು ಮತ್ತು ನಿಟ್ಟೆಯಲ್ಲಿ 40ಕ್ಕೂ ಹೆಚ್ಚು ವಿದ್ಯಾಸಂಸ್ಥೆಗಳನ್ನು ಹೊಂದಿವೆ. ಇದರಲ್ಲಿ ವೈದ್ಯಕೀಯ, ಎಂಜಿನಿಯರಿಂಗ್, ದಂತವೈದ್ಯಕೀಯ, ಫಾರ್ಮಸಿ ಮತ್ತು ಮ್ಯಾನೇಜ್‌ಮೆಂಟ್ ಕಾಲೇಜುಗಳು ಸೇರಿವೆ.

ಪ್ರಸ್ತುತ ಅವರು ಮಂಗಳೂರಿನ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಾಧಿಪತಿಯಾಗಿದ್ದರು. ಲೆಮಿನಾ ಸಸ್ಪೆನ್ಷನ್ ಪ್ರೈವೇಟ್ ಲಿಮಿಟೆಡ್ ಸೇರಿದಂತೆ ಲೆಮಿನಾ ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷರಾಗಿದ್ದಾರೆ.

ಲೆಮಿನ ಸಂಸ್ಥೆಯು ಆಟೋಮೊಬೈಲ್ ಬಿಡಿಭಾಗಗಳ ತಯಾರಿಕೆಯಲ್ಲಿ ಪ್ರಮುಖ ಸಂಸ್ಥೆಯಾಗಿದೆ.
ವಿನಯ್ ಹೆಗ್ಡೆ ಅವರು ರಾಜ್ಯದ ಹಲವು ಸಮಿತಿಗಳಲ್ಲಿ ಮತ್ತು ಕೈಗಾರಿಕಾ ಒಕ್ಕೂಟಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಹಲವು ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದರು. ಶಿಕ್ಷಣ ಮತ್ತು ಸಮಾಜ ಸೇವೆಗಾಗಿ ಅವರಿಗೆ ಕರ್ನಾಟಕ ಸರ್ಕಾರದಿಂದ ‘ರಾಜ್ಯೋತ್ಸವ ಪ್ರಶಸ್ತಿ’ ಮಂಗಳೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಲಭಿಸಿದೆ.

ವಿನಯ ಹೆಗ್ಡೆ ಅವರು ಕರಾವಳಿ ಕರ್ನಾಟಕದ ಶೈಕ್ಷಣಿಕ ಮತ್ತು ಕೈಗಾರಿಕಾ ಕ್ರಾಂತಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ದೂರದೃಷ್ಟಿಯ ನಾಯಕರಾಗಿದ್ದರು.

ವಿನಯ್ ಹೆಗ್ಡೆ ಅವರು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆಯವರ ಸೋದರರಾಗಿದ್ದು, ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

ಹೆಗ್ಡೆ ಅವರ ಪಾರ್ಥಿವ ಶರೀರವನ್ನು ಮಂಗಳೂರಿನ ಕದ್ರಿ ಶಿವಭಾಗ್ ನ ಅವರ ಸ್ವಗೃಹದಲ್ಲಿ ಇಂದು ಬೆಳಿಗ್ಗೆ 8.30 ರಿಂದ 3 ಗಂಟೆಯ ತನಕ ಸಾರ್ವಜನಿಕ ಅಂತಿಮ ದರ್ಶನಕ್ಕೆ ಇಡಲಾಗಿದೆ. ಇಂದು ಸಂಜೆ 6 ಗಂಟೆಗೆ ಕಾರ್ಕಳದ ನಿಟ್ಟೆಯಲ್ಲಿ ಮೃತರ ಅಂತ್ಯ ಸಂಸ್ಕಾರ ನಡೆಯಲಿದ್ದು ಸಂಜೆ 4.30 ರಿಂದ 6 ರ ತನಕ ನಿಟ್ಟೆ ಕ್ಯಾಂಪಸ್ ನಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

error: Content is protected !!