ಹೊಸದಿಗಂತ ವರದಿ ಮಡಿಕೇರಿ:
ನಿಷೇಧಿತ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಹೊದ್ದೂರು ಗ್ರಾಮದ ನಿವಾಸಿಗಳಾದ ಮುಜೀಬ್ ರೆಹಮಾನ್ (28), ಅಮೀರ್.ಕೆ.ಎಂ(29) ಮತ್ತು ಬಲಮುರಿ ನಿವಾಸಿ ಇರ್ಫಾನ್.ಎಸ್.ಎ (29) ಬಂಧಿತ ಆರೋಪಿಗಳಾಗಿದ್ದು, ಇವರಿಂದ 275 ಗ್ರಾಂ ಗಾಂಜಾ, ಮೂರು ಮೊಬೈಲ್, ಒಂದು ಆಟೋ ಹಾಗೂ ಒಂದು ದ್ವಿ-ಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.
ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟದ ಬಗ್ಗೆ ಬರುತ್ತಿರುವ ದೂರುಗಳ ಹಿನ್ನೆಲೆಯಲ್ಲಿ ಮಾದಕ ವಸ್ತುಗಳ ಮಾರಾಟ/ಬಳಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಸೋಮವಾರಪೇಟೆ ಉಪವಿಭಾಗದ ಡಿವೈಎಸ್ಪಿ ಆರ್. ವಿ.ಗಂಗಾಧರಪ್ಪ, ಮಡಿಕೇರಿ ಗ್ರಾಮಾಂತರ ವೃತ್ತದ ಇನ್ಸ್‌ಪೆಕ್ಟರ್ ಅನೂಪ್ ಮಾದಪ್ಪ, ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿಗಳ ವಿಶೇಷ ತಂಡವನ್ನು ರಚಿಸಲಾಗಿತ್ತು.
ಈ ತಂಡಕ್ಕೆ ಬಲಮುರಿ ಗ್ರಾಮದ ಕಾವೇರಿ ಹೊಳೆಯ ಸಮೀಪದ ಹೊಳೆಮುಡಿ (ಬಲಂಗಮುಡಿ) ಮೈದಾನದ ಬಳಿ ನಿಷೇಧಿತ ಮಾದಕ ವಸ್ತುಗಳನ್ನು ಸರಬರಾಜು/ಮಾರಾಟ ಮಾಡುತ್ತಿರುವುದಾಗಿ ದೊರೆತ ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಆರೋಪಿಗಳನ್ನು ಮಾಲು ಸಹಿತ ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಶ್ಲಾಘಿಸಿರುವ ಅವರು, ಯುವಕ-ಯುವತಿಯರು ಮಾದಕ ವೈಸನಿಗಳಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುವುದನ್ನು ತಡೆಗಟ್ಟುವ ಸಲುವಾಗಿ ಮಾದಕ ವಸ್ತುಗಳನ್ನು ಬಳಸುವ ಹಾಗೂ ಮಾರಾಟ ಮಾಡುವ ವ್ಯಕ್ತಿಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಹಾಗೂ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಕೋರಿದ್ದಾರೆ.