ಹೊಸದಿಂಗತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 5ನೇ ಗ್ಯಾರಂಟಿ ಘೋಷಣೆಯಾಗಿರುವ “ಯುವ ನಿಧಿ” ಯೋಜನೆಯಡಿ ಫಲಾನುಭವಿಗಳಿಗೆ ನಗದು ವರ್ಗಾವಣೆ ಕಾರ್ಯಕ್ರಮಕ್ಕೆ ಶಿವಮೊಗ್ಗ ನಗರ ಸಜ್ಜಾಗಿದೆ. ಸ್ವಾಮಿ ವಿವೇಕಾನಂದ ಜನ್ಮ ದಿನವಾದ ಶುಕ್ರವಾರ ಜ. 12 ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ಕಾರ್ಯಕ್ರಮ ನಡೆಯಲಿದೆ.
ಸುಮಾರು 85 ಸಾವಿರಕ್ಕೂ ಅಧಿಕ ಜನರಿಗೆ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಡಿಪ್ಲೊಮಾ ಮತ್ತು ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಉದ್ಯೋಗ ಭತ್ಯೆ ನೀಡುವ ಸರ್ಕಾರದ ಮಹತ್ವಾಕಾಂಕ್ಷಿಯ ಈ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಮಧು ಬಂಗಾರಪ್ಪ, ಡಾ.ಶರಣ ಪ್ರಕಾಶ್ ಪಾಟೀಲ್, ಡಾ.ಎಂ.ಸಿ. ಸುಧಾಕರ್ ಚಾಲನೆ ನೀಡಲಿದ್ದಾರೆ.
ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಿಂದ ಸುಮಾರು 1 ಲಕ್ಷಕ್ಕೂ ಹೆಚ್ಚಿನ ಫಲಾನುಭವಿಗಳು ಹಾಗೂ ಹೆಚ್ಚಿನ ಸಂಖ್ಯೆಯ ಜನರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮೊದಲ ಕಂತಿನ ಹಣವನ್ನು ಬಿಡುಗಡೆ ಮಾಡಲಾಗುತ್ತದೆ.