ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಾಚ್ಯ ಮತ್ತು ನಿಂದನಾತ್ಮಕ ಕಾಮೆಂಟ್‌ಗಳನ್ನು ಮಾಡಿದ ಪ್ರಕರಣದಲ್ಲಿ ಸೈಬರ್ ಕ್ರೈಂ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಚಂದ್ರು ಮತ್ತು ನಿಖಿಲ್ ಎಂದು ಗುರುತಿಸಲಾಗಿದ್ದು, ಇವರಲ್ಲಿ ಓರ್ವ ಬೆಂಗಳೂರು ಮೂಲದ ವ್ಯಕ್ತಿ ಎಂದು ತಿಳಿದುಬಂದಿದೆ.
2025ರ ಡಿಸೆಂಬರ್‌ನಲ್ಲಿ ದಾವಣಗೆರೆಯಲ್ಲಿ ವಿಜಯಲಕ್ಷ್ಮಿ ನೀಡಿದ್ದ ಹೇಳಿಕೆಯ ಬಳಿಕ, ಅವರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಅಶ್ಲೀಲ ಕಾಮೆಂಟ್‌ಗಳು ವ್ಯಾಪಕವಾಗಿ ಹರಡಿದ್ದವು. ಈ ಹಿನ್ನೆಲೆಯಲ್ಲಿ ಅವರು 15 ಇನ್‌ಸ್ಟಾಗ್ರಾಂ ಖಾತೆಗಳು ಹಾಗೂ 150ಕ್ಕೂ ಹೆಚ್ಚು ಅವಮಾನಕಾರಿ ಕಾಮೆಂಟ್‌ಗಳ ವಿವರಗಳೊಂದಿಗೆ ಸೈಬರ್ ಪೊಲೀಸರಿಗೆ ದೂರು ಸಲ್ಲಿಸಿದ್ದರು. ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ, ಇದುವರೆಗೆ 15 ಖಾತೆಗಳ ಪೈಕಿ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇತ್ತೀಚೆಗೆ ವಿಜಯಲಕ್ಷ್ಮಿ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಅವರನ್ನು ಭೇಟಿಯಾಗಿ ತಮ್ಮ ದೂರಿಗೆ ತಡವಾಗಿ ಸ್ಪಂದನೆ ಸಿಕ್ಕಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ತಮ್ಮ ದೂರು ನಿರ್ಲಕ್ಷ್ಯಕ್ಕೊಳಗಾಗಿದ್ದು, ಮತ್ತೊಂದು ಪ್ರಕರಣದಲ್ಲಿ ಮಾತ್ರ ತ್ವರಿತ ಕ್ರಮ ಜರುಗಿದೆ ಎಂದು ಅವರು ಪರೋಕ್ಷವಾಗಿ ಆಕ್ಷೇಪಿಸಿದ್ದರು. ಈ ವಿಚಾರ ಬೆಳಕಿಗೆ ಬಂದ ಬಳಿಕ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಪೊಲೀಸ್ ಆಯುಕ್ತರು ಭರವಸೆ ನೀಡಿದ್ದರು.
ಪ್ರಸ್ತುತ ಬಂಧಿತ ಆರೋಪಿಗಳ ವಿಚಾರಣೆ ನಡೆಯುತ್ತಿದ್ದು, ಉಳಿದ ಆರೋಪಿಗಳನ್ನು ಪತ್ತೆಹಚ್ಚಲು ತನಿಖೆಯನ್ನು ಇನ್ನಷ್ಟು ಚುರುಕುಗೊಳಿಸಲಾಗಿದೆ.

