ಹೊಸದಿಗಂತ ವರದಿ, ಹುಬ್ಬಳ್ಳಿ:
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರ ವಿಚಾರದಲ್ಲಿ ಕೇಂದ್ರ ವರಿಷ್ಠರು ತೆಗೆದುಕೊಂಡ ನಿರ್ಧಾರ ನಾನು ಸ್ವಾಗತಿಸುತ್ತೇನೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.
ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷದ ತತ್ವ, ಸಿದ್ಧಾಂತ ಒಪ್ಪಿ ಅನೇಕ ಕಾಂಗ್ರೆಸ್, ಜೆಡಿಎಸ್ ನಾಯಕರು ಈಗಾಗಲೇ ಬಿಜೆಪಿಗೆ ಬಂದಿದ್ದಾರೆ. ಅದರಂತೆ ಶೆಟ್ಟರ ಸಹ ಪಕ್ಷ ಸೇರ್ಪಡೆಯಾಗಿದ್ದಾರೆ ಎಂದರು.
ಬಿಜೆಪಿ ನಾಯಕರಲ್ಲಿ ಯಾವುದೇ ಮುನಿಸಿಲ್ಲ. ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯಾಗಿ ಮಾಡುವುದೊಂದೆ ನಮ್ಮ ಗುರಿಯಾಗಿದ್ದು, ಅದರ ಮುಂದೆ ಎಲ್ಲವೂ ನಗಣ್ಯ ಎಂದರು.
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಈಗಾಗಲೇ ಜಿಲ್ಲೆಯಲ್ಲಿ ಉತ್ತಮ ಕಾರ್ಯ ಮಾಡುತ್ತಿದ್ದಾರೆ. ಈ ವಿಷಯವಾಗಿ ವರಿಷ್ಠರು ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧವಾಗಿರುತ್ತೇನೆ. ನಾನು ಪಕ್ಷದ ಶಿಸ್ತಿನ ಸಿಪಾಯಿ ಎಂದು ತಿಳಿಸಿದರು.
ಪಕ್ಷಕ್ಕೆ ಯಾವುದೇ ವ್ಯಕ್ತಿ ಅನಿವಾರ್ಯ ಅಲ್ಲ. ಬಿಜೆಪಿ ಬಲಿಷ್ಠವಾಗಿದೆ. ಶೆಟ್ಟರ್ ಅವರಿಗೆ ಕಾಂಗ್ರೆಸ್ ಬೇಸರವಾದ ಕುರಿತು ನನಗೆ ಗೊತ್ತಿಲ್ಲ. ಅವರನ್ನೇ ಕೇಳಬೇಕು ಎಂದು ಹೇಳಿದರು.