ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಕೇಂದ್ರದ ಮಲತಾಯಿ ಧೋರಣೆಯಿಂದ ಕಳೆದ 5 ವರ್ಷಗಳಲ್ಲಿ ರಾಜ್ಯಕ್ಕೆ 62 ಸಾವಿರ ಕೋಟಿ ಹಣ ನಷ್ಟವಾಗಿದೆ. ಹೀಗಾಗಿ ಫೆ.7 ರಂದು ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರವು ದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ
ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ನೇತೃತ್ವದಲ್ಲಿ ನಾನು ಸೇರಿದಂತೆ ರಾಜ್ಯದ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಈ ಪ್ರತಿಭಟನೆಯಲ್ಲಿ ಭಾಗವಹಿಸುತ್ತೇವೆ. ಪ್ರತಿಭಟನೆ ಸ್ಥಳವಕಾಶದ ಬಗ್ಗೆ ಕೆಂದ್ರಕ್ಕೆ ಪತ್ರ ಬರೆದಿದ್ದು, ಅನುಮತಿ ಸಿಕ್ಕ ಸ್ಥಳದಲ್ಲಿ ಪ್ರತಿಭಟನೆ ನಡೆಸುತ್ತೇವೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಪ್ರತಿಭಟನೆ (Protest) ನಮ್ಮ ಮೂಲಭೂತ ಹಕ್ಕು. ಕಾಂಗ್ರೆಸ್ ಜನಪ್ರತಿನಿಧಿಗಳು ಭಾಗವಹಿಸಲಿರುವ ಈ ಪ್ರತಿಭಟನೆಯಲ್ಲಿ ಪ್ರತಿಪಕ್ಷದ ಸಂಸದರು. ಶಾಸಕರು ಭಾಗವಹಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.
2018-19ರಲ್ಲಿ ಕೇಂದ್ರ ಸರ್ಕಾರದ ಬಜೆಟ್ ಗಾತ್ರ 24.5 ಲಕ್ಷ ಕೋಟಿ ಇತ್ತು. 2023-24ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬಜೆಟ್ ಗಾತ್ರ ದುಪ್ಪಟ್ಟಾಗಿದ್ದು 47 ಲಕ್ಷ ಕೋಟಿಯಾಗಿದೆ. 2018-19ರಲ್ಲಿ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ರಾಜ್ಯಕ್ಕೆ 46 ಸಾವಿರ ಕೋಟಿ ಅನುದಾನ ಸಿಕ್ಕಿತ್ತು. ಆದರೆ 2024-25ನೇ ಸಾಲಿನಲ್ಲಿ ರಾಜ್ಯಕ್ಕೆ ಬಂದಿರುವ ಅನುದಾನ ಕೇವಲ 50 ಸಾವಿರ ಕೋಟಿ ಮಾತ್ರ. ಕೇಂದ್ರ ಸರ್ಕಾರದ ಬಜೆಟ್ ಗಾತ್ರ ದುಪ್ಪಟ್ಟಾಗಿದ್ದರೂ ರಾಜ್ಯಕ್ಕೆ ಬರುವ ಅನುದಾನದ ಪ್ರಮಾಣದಲ್ಲಿ ಅತ್ಯಲ್ಪ ಏರಿಕೆ ಮಾತ್ರವಾಗಿದೆ. ಕರ್ನಾಟಕ ರಾಜ್ಯ ದೇಶದಲ್ಲೇ ಪ್ರಗತಿಪರ ರಾಜ್ಯ. ಮಹಾರಾಷ್ಟ್ರ ಬಿಟ್ಟರೆ ಕೇಂದ್ರಕ್ಕೆ ಅತಿ ಹೆಚ್ಚು ತೆರಿಗೆ ಪಾವತಿ ಮಾಡುತ್ತಿರುವ ರಾಜ್ಯ ಕರ್ನಾಟಕ. ಆದ್ರೆ ಕಳೆದ 5 ವರ್ಷಗಳ ಬಜೆಟ್ ನೋಡಿದ್ರೆ ನಮಗೆ ನಮ್ಮ ಪಾಲು ನ್ಯಾಯುತವಾಗಿ ಸಿಕ್ಕಿಲ್ಲ. ರಾಜ್ಯದ 28 ಸಂಸದರ ಪೈಕಿ 27 ಸಂಸದರು ಎನ್‌ಡಿಎ ಮೈತ್ರಿಕೂಟದವರೇ ಆಗಿದ್ದರೂ ನಮಗೆ ಸೂಕ್ತ ನ್ಯಾಯ ಸಿಗುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.