ಹೊಸದಿಗಂತ ಅಥಣಿ
ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಶಾಸಕ ಲಕ್ಷ್ಮಣ ಸವದಿ ಮತ್ತು ಅವರ ಪುತ್ರ ಚಿದಾನಂದ ಸವದಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ, ಬೆಳಗಾವಿ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ನೌಕರರು ಶುಕ್ರವಾರ ರಾತ್ರಿ ಅಥಣಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಪ್ರಮುಖ ರಸ್ತೆಗಳ ಮೂಲಕ ಮೆರವಣಿಗೆ ನಡೆಸಿದ ನೌಕರರು, ಸವದಿ ಕುಟುಂಬದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು. ಮೆರವಣಿಗೆಯು ಅಥಣಿ ಪೊಲೀಸ್ ಠಾಣೆಯ ಬಳಿ ತಲುಪುತ್ತಿದ್ದಂತೆ, ನೌಕರರು ಠಾಣೆಗೆ ಮುತ್ತಿಗೆ ಹಾಕಿ ಶಾಸಕರು ಹಾಗೂ ಅವರ ಪುತ್ರನ ವಿರುದ್ಧ ತಕ್ಷಣವೇ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕೆಂದು ಪಟ್ಟು ಹಿಡಿದರು.
ಬ್ಯಾಂಕ್ ಸಿಬ್ಬಂದಿಗೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ಇದಕ್ಕೆ ಸವದಿ ಕುಟುಂಬವೇ ನೇರ ಕಾರಣ ಎಂದು ನೌಕರರ ಸಂಘದ ಮುಖಂಡರು ಆರೋಪಿಸಿದರು. ಈ ಪ್ರಕರಣದಲ್ಲಿ ಪೊಲೀಸರು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ನ್ಯಾಯ ಸಿಗುವವರೆಗೂ ಹೋರಾಟ ಕೈಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಅಧಿಕಾರದ ಪ್ರಭಾವಕ್ಕೆ ಮಣಿಯದೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂಬುದು ನೌಕರರ ಪ್ರಮುಖ ಬೇಡಿಕೆಯಾಗಿದೆ.
ರಾತ್ರಿ ವೇಳೆ ನಡೆದ ಈ ದಿಢೀರ್ ಪ್ರತಿಭಟನೆಯಿಂದಾಗಿ ಅಥಣಿ ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಠಾಣೆಯ ಸುತ್ತಮುತ್ತ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಪ್ರತಿಭಟನೆಯ ಅಂತ್ಯದಲ್ಲಿ ನೌಕರರು ತಮ್ಮ ಬೇಡಿಕೆಗಳನ್ನೊಳಗೊಂಡ ಮನವಿ ಪತ್ರವನ್ನು ಪೊಲೀಸ್ ಅಧಿಕಾರಿಗಳಿಗೆ ಸಲ್ಲಿಸಿದರು.

