ಹೊಸದಿಗಂತ ಡಿಜಿಟಲ್ ಡೆಸ್ಕ್:
ತೀವ್ರ ವಿರೋಧದ ನಡುವೆಯೂ 5, 8, 9 ಮತ್ತು 11ನೇ ತರಗತಿಗಳಲ್ಲಿ ಪರೀಕ್ಷೆ ನಡೆಸಲು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸರ್ಕಾರ ಜಂಟಿಯಾಗಿ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ನ ಏಕಸದಸ್ಯ ನ್ಯಾಯಾಧೀಶರು ರದ್ದುಗೊಳಿಸಿದ್ದಾರೆ.
ನ್ಯಾಯಮೂರ್ತಿ ರವಿ ಹೊಸಮನಜ ನೀಡಿರುವ ಆದೇಶದಿಂದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಡಿಸೆಂಬರ್ 2023 ರಲ್ಲಿ, ಕರ್ನಾಟಕ ನೋಂದಾಯಿತ ಖಾಸಗಿ ಶಾಲೆಗಳ ಸಂಘ ರಾಜ್ಯ ಸರ್ಕಾರದ ಸುತ್ತೋಲೆಗಳನ್ನು ಪ್ರಶ್ನಿಸಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿತ್ತು. ಹೈಕೋರ್ಟ್ ವಾದ ಆಲಿಸಿ ಸರ್ಕಾರದ ಸುತ್ತೋಲೆಯನ್ನು ರದ್ದುಪಡಿಸಿ ಆದೇಶ ನೀಡಿದೆ.
ಇದೀಗ ಸುಪ್ರೀಂ ಕೋರ್ಟ್ ಮೇಲ್ಮನವಿಯನ್ನು ವಜಾಗೊಳಿಸಿದ್ದರಿಂದ ಸರ್ಕಾರದ ನಿರ್ಧಾರವನ್ನು ರದ್ದುಗೊಳಿಸಲಾಗಿದೆ. ತಕ್ಷಣಕ್ಕೆ ಮೇಲ್ಮನವಿ ಸಲ್ಲಿಸಿ ಪರೀಕ್ಷೆ ನಡೆಸುವ ಸಾಧ್ಯತೆ ಇಲ್ಲದಿರುವುದರಿಂದ ಈ ವರ್ಷದ ಮಟ್ಟಿಗೆ ಪಬ್ಲಿಕ್ ಪರೀಕ್ಷೆ ಇರುವುದಿಲ್ಲ ಎನ್ನಲಾಗಿದೆ.