ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿದ್ಯುತ್ ಸ್ಪರ್ಶದಿಂದ ಲೈನ್ಮ್ಯಾನ್ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಹೊಸಳ್ಳಿ ಗ್ರಾಮದ ಬಳಿ ನಡೆದಿದೆ. ಮಸ್ತಾನ್ (24) ಘಟನೆಯಲ್ಲಿ ಮೃತಪಟ್ಟವರು.
ಮಸ್ತಾನ್ ಕಳೆದ ಕೆಲವು ದಿನಗಳಿಂದ ದಿನಗೂಲಿ ನೌಕರನಾಗಿ ಕೆಲಸ ಮಾಡುತ್ತಿದ್ದರು. ಆದರೆ ವಿದ್ಯುತ್ ಸ್ಪರ್ಶದಿಂದ ಆತ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈತನ ಸಾವಿಗೆ ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನೆಗೆ ಪ್ರತಿಯಾಗಿ ಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಜೆಸ್ಕಾಂ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಬರುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಈ ಕುರಿತು ರಟಕಲ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.