ಹೊಸದಿಗಂತ ವರದಿ, ಶಿವಮೊಗ್ಗ :
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಲ್ಕನೇ ಬಾರಿಗೆ ಹಾಲಿ ಸಂಸದ ಬಿ.ವೈ.ರಾಘವೇಂದ್ರ ಅವರನ್ನು ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ಬುಧವಾರ ಸಂಜೆ ವಿನೋಬನಗರದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಇದೇ ವೇಳೆ ವಿನೋಬನಗರದ ಸ್ವಗೃಹದಲ್ಲಿ ಪಕ್ಷದ ಪ್ರಮುಖರೊಂದಿಗೆ ಸಿಹಿ ಹಂಚಿಕೊಳ್ಳುವ ಮೂಲಕ ರಾಘವೇಂದ್ರ ಕೂಡಾ ಸಂತಸ ಹಂಚಿಕೊಂಡರು.
ಈ ವೇಳೆ ಸುದ್ದಿಗಾರರ ಜೊತೆಗೆ ರಾಘವೇಂದ್ರ ಮಾತನಾಡಿ, ನನ್ನ ಮೇಲೆ ಅಪಾರವಾದ ನಂಬಿಕೆ ಇಟ್ಟು ಸತತ ನಾಲ್ಕನೇ ಬಾರಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ , ಪ್ರಧಾನಿ ನರೇಂದ್ರ ಮೋದಿ ಅವರಿಗೆ, ಗೃಹ ಸಚಿವ ಅಮಿತ್ ಶಾ ಹಾಗೂ ಪಕ್ಷದ ರಾಷ್ಟ್ರ ಮಟ್ಟದ ಮತ್ತು ರಾಜ್ಯ ಮಟ್ಟದ ಎಲ್ಲಾ ಹಿರಿಯರಿಗೆ ನಾನು ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಲು ಎಲ್ಲರೂ ಕೈಜೋಡಿಸಬೇಕು. ಮಲೆನಾಡಿನ ಕ್ಷೇತ್ರದಿಂದ ಇದಕ್ಕೆ ಮತದಾರರು ಆಶೀರ್ವಾದ ಮಾಡುತ್ತಾರೆ ಎಂಬ ವಿಶ್ಬಾಸ ಇದೆ. ಮಲೆನಾಡಿನ ಅಭಿವೃದ್ಧಿ ಕಾರ್ಯಗಳನ್ನು ಇನ್ನಷ್ಟು ಹೆಚ್ಚು ಮಾಡಲು ಶಕ್ತಿ ದೊರೆಯುವ ವಿಶ್ವಾಸ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಮೇಘರಾಜ್, ದತ್ತಾತ್ರಿ, ಡಾ.ಧನಂಜಯ ಸರ್ಜಿ ಮುಂತಾದವರು ಹಾಜರಿದ್ದರು.