ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮತ್ತೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದ್ದು, ಮಾರ್ಚ್ 25ಕ್ಕೆ ಅಭ್ಯರ್ಥಿ ಅಧಿಕೃತವಾಗಿ ಘೋಷಣೆ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
ಮಂಡ್ಯದಲ್ಲಿ ನಡೆದ ಲೋಕಸಭಾ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಕುಮಾರಸ್ವಾಮಿ ಅವರು, ಲೋಕಸಭೆ ಚುನಾವಣೆಗೆ ನಿಲ್ಲಲು ನಿಖಿಲ್ನನ್ನು ಒಪ್ಪಿಸಲು ಮುಂದಾಗುತ್ತೇನೆ. ನಿಮ್ಮ ಆಸೆಗೆ ನಾವು ಭಂಗ ತರಲ್ಲ. ಪುತ್ರ ನಿಖಿಲ್ ಕುಮಾರಸ್ವಾಮಿಗೂ ಒಂದು ಮಾತು ಹೇಳುತ್ತೇನೆ. ನಿಮ್ಮ ಭಾವನೆಗಳಿಗೆ ಯಾವುದೇ ಕಾರಣಕ್ಕೂ ನಿರಾಸೆಯಾಗಲ್ಲ. ನಿಮ್ಮ ಆಸೆಯ ಪ್ರಕಾರ ಅದನ್ನು ನೆರವೇರಿಸಿಕೊಳ್ಳುತ್ತೇನೆ. ಮಾರ್ಚ್ 21ಕ್ಕೆ ನನಗೆ ಆಪರೇಷನ್ ಇದೆ. ಆದ್ದರಿಂದ ಮಾರ್ಚ್ 25ರಂದು ಮಂಡ್ಯಕ್ಕೆ ಬಂದು ಅಭ್ಯರ್ಥಿ ಘೋಷಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.
ಈ ಮೂಲಕ ಪರೋಕ್ಷವಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನೇ ಮಂಡ್ಯದಿಂದ ಕಣಕ್ಕಿಳಿಸುತ್ತೇನೆ ಎಂದು ಹೇಳಿದರು. ಇದರೊಂದಿಗೆ ಮಂಡ್ಯ ಜೆಡಿಎಸ್ ಅಭ್ಯರ್ಥಿ ಯಾರು ಎನ್ನುವ ಪ್ರಶ್ನೆಗಳಿಗೆ ಇದೀಗ ಉತ್ತರ ಸಿಕ್ಕಂತಾಗಿದೆ.
ಈ ಹಿಂದೆ ನಿಖಿಲ್ ಕುಮಾರಸ್ವಾಮಿ ಅವರು ಈ ಬಾರಿಯ ಚುನಾವಣೆಗೆ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದರು. ಆದರೆ ಅಭಿಮಾನಿಗಳು, ನಾಯಕರು ನಿಖಿಲ್ ಸ್ಪರ್ಧೆ ಮಾಡಬೇಕೆಂದು ಒಲವು ವ್ಯಕ್ತಪಡಿಸಿದ್ದಾರೆ. ಹೀಗಾಗಿ ಕುಮಾರಸ್ವಾಮಿ, ಪುತ್ರನನ್ನು ಕಣಕ್ಕಿಳಿಸುವ ತೀರ್ಮಾನ ಮಾಡಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದ್ದು, ಮಾರ್ಚ್ 25ರಂದು ಘೋಷಣೆ ಮಾಡಲಿದ್ದಾರೆ.