ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಸುದೀರ್ಘ ಆಡಳಿತಾವಧಿಯ ದಾಖಲೆಗೆ ಸಮನಾಗುವ ಮೂಲಕ ರಾಜ್ಯ ರಾಜಕೀಯದಲ್ಲಿ ಗಮನ ಸೆಳೆದಿದ್ದಾರೆ. ಇದರ ಬೆನ್ನಲ್ಲೇ ಪೂರ್ಣಾವಧಿ ಮುಖ್ಯಮಂತ್ರಿ ಕುರಿತು ನಡೆಯುತ್ತಿರುವ ಚರ್ಚೆಗೆ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ತಾನು ಪೂರ್ಣಾವಧಿ ಮುಖ್ಯಮಂತ್ರಿ ಆಗುವ ವಿಶ್ವಾಸ ಹೊಂದಿದ್ದೇನೆ ಎಂದು ಹೇಳಿದರು. ಆದರೆ ಈ ಸಂಬಂಧ ಅಂತಿಮ ನಿರ್ಧಾರವನ್ನು ಪಕ್ಷದ ಹೈಕಮಾಂಡ್ ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು. 2028ರ ವರೆಗೆ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ ಎಂಬ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನನಗೂ ಅದೇ ವಿಶ್ವಾಸವಿದೆ ಎಂದು ಹೇಳಿದರು.
ಇದನ್ನೂ ಓದಿ: Snacks | ಮ್ಯಾಗಿ ಭೇಲ್: ಟೀ ಟೈಮ್‌ಗೆ ಕ್ರಂಚಿ ಸ್ಪೆಷಲ್ ಸ್ನ್ಯಾಕ್!
ದೇವರಾಜ ಅರಸು ಅವರ ದಾಖಲೆ ಸಮನಾಗಿಸಿದ ಕುರಿತು ಮಾತನಾಡಿದ ಸಿದ್ದರಾಮಯ್ಯ, ದಾಖಲೆ ಮುರಿಯಬೇಕು ಎಂಬ ಉದ್ದೇಶ ನನಗಿರಲಿಲ್ಲ, ಇದು ಕಾಕತಾಳೀಯ ಎಂದರು. ಅರಸು ಅವರ ಕಾಲಘಟ್ಟವೇ ಬೇರೆ, ನನ್ನ ಆಡಳಿತದ ಸಂದರ್ಭ ಬೇರೆ ಎಂದು ಹೇಳಿದರು. ಜನರ ಆಶೀರ್ವಾದದಿಂದ ಈ ಸ್ಥಾನಕ್ಕೆ ಬಂದಿದ್ದೇನೆ ಎಂದು ಸಂತಸ ವ್ಯಕ್ತಪಡಿಸಿದರು.
ರಾಜಕೀಯ ಜೀವನ ಖುಷಿ ಕೊಟ್ಟಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, ಜನರ ಸೇವೆಯೇ ನನಗೆ ನಿಜವಾದ ಸಂತೋಷ ಎಂದರು. ಸಮಾಜದಲ್ಲಿರುವ ಅಸಮಾನತೆ ಹೋಗುವವರೆಗೂ ಮತ್ತು ಎಲ್ಲರಿಗೂ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಯಲಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

